

ಮೈಸೂರು: ಕರ್ನಾಟಕದಲ್ಲಿ ಜಲಾಶಯಗಳಿಗೆ ನೀರಿನ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಅದರಲ್ಲೂ ಕೇರಳದ ವಯನಾಡು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಎಚ್.ಡಿ. ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ದಿಢೀರಾಗಿ ಏರಿಕೆ ಕಂಡಿದ್ದು, ಜಲಾಶಯದಿಂದ ನದಿಗೆ ರಾತ್ರಿ 20 ಸಾವಿರ ಕ್ಯೂಸೆಕ್ ನೀರು ಹರಿಯ ಬಿಡಲಾಗುತ್ತಿದೆ.
ಬೆಳಗ್ಗೆ ಜಲಾಶಯದ ಒಳಹರಿವಿನ ಪ್ರಮಾಣ 6424 ಕ್ಯೂಸೆಕ್ ಇತ್ತು. ಒಳ ಹರಿವಿನ ಪ್ರಮಾಣದ ಆಧಾರದ ಮೇಲೆ ನದಿಗೆ 5,000 ಕ್ಯೂಸೆಕ್ ನೀರು ಹರಿಯ ಬಿಡಲಾಗುತಿತ್ತು. ಆದರೆ ರಾತ್ರಿ 8 ಗಂಟೆಯ ಹೊತ್ತಿಗೆ ಜಲಾಶಯದ ಒಳ ಹರಿವಿನ ಪ್ರಮಾಣ ದಿಢೀರಾಗಿ 19,181 ಕ್ಯೂಸೆಕ್‌ಗೆ ಏರಿಕೆ ಕಂಡಿದ್ದು, ಜಲಾಶಯದಿಂದ ನದಿಗೆ 20,000 ಕ್ಯೂಸೆಕ್ ನೀರು ಹರಿಯ ಬಿಡಲಾಗುತ್ತಿದೆ.
ಗರಿಷ್ಠ 2284 ಅಡಿಗಳಷ್ಟು ನೀರಿನ ಸಂಗ್ರಹಣಾ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಪ್ರಸ್ತುತ 2283.30 ಅಡಿಗಳಷ್ಟು ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿ ಬಹುತೇಕ ಭರ್ತಿಯಾಗಿದೆ. ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಜಲಾಶಯ ಸಂಪೂರ್ಣ ಭರ್ತಿಯಾಗುವ ಮುನ್ನವೇ ಅಣೆಕಟ್ಟೆಯ ಸುರಕ್ಷತೆಯ ದೃಷ್ಟಿಯಿಂದ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿದೆ.
ಸೇತುವೆ ಮುಳುಗಡೆ: ದಿಢೀರಾಗಿ ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಜಲಾಶಯದ ಮುಂಭಾಗದ ಸೇತುವೆ ಮುಳುಗಡೆ ಆಗಿದ್ದು ವಾಹನ ಸಂಚಾರ ರದ್ದು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ಜಲಾಶಯದ ಮೇಲೆ ಸಂಚರಿಸಲು ನೀರಾವರಿ ಇಲಾಖೆ ಅವಕಾಶ ಮಾಡಿಕೊಟ್ಟಿದ್ದು, ಬಸ್ ಹಾಗೂ ಇನ್ನಿತರ ಭಾರಿ ವಾಹನಗಳು ಸರಗೂರು ಮಾರ್ಗವಾಗಿ ಸಂಚರಿಸಲು ತಾಲೂಕು ಆಡಳಿತ ಸೂಚಿಸಿದೆ.