

ಚಿತ್ರದುರ್ಗ: ವ್ಯಕ್ತಿಯ ಮನಸ್ಸು ಮತ್ತು ದೇಹದ ಮೇಲೆ ಯೋಗ ಧನಾತ್ಮಕ ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದು ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು.
ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮುರುಘಾಮಠದಿಂದ ಬುಧವಾರ ಏರ್ಪಡಿಸಿದ್ದ ಯೋಗ ನಡಿಗೆ ಸಮಾರೋಪದಲ್ಲಿ ಮಾತನಾಡಿ, ಯೋಗವನ್ನು ಯಾವುದೇ ಒಂದು ಧರ್ಮಕ್ಕೆ ಸೀಮಿತಗೊಳಿಸಬಾರದು. ಆರೋಗ್ಯದ ದೃಷ್ಟಿಯಿಂದ ಯೋಗ ಬೇಕು. ಒತ್ತ ಡದಿಂದ ಹೊರಬರಲು ಯೋಗ ಸಹಕಾರಿಯಾಗಿದೆ ಎಂದರು.
ಮುರುಘಾಮಠದ ಆಡಳಿತ ಮಂಡಳಿ ಸದಸ್ಯ ಡಾ. ಶ್ರೀ ಬಸವಕುಮಾರ ಸ್ವಾಮೀಜಿ ಮಾತನಾಡಿ, ಆರೋಗ್ಯಪೂರ್ಣ ಮನಸ್ಸಿದ್ದರೆ ಪ್ರಬುದ್ಧ ಸಮಾಜ ನಿರ್ಮಾಣ ಸಾಧ್ಯ. ಯೋಗದ ಬಗ್ಗೆ ವಿಶ್ವವ್ಯಾಪಿ ವ್ಯಾಪಕ ಚರ್ಚೆಯಾಗುತ್ತಿದೆ ಎಂದು ತಿಳಿಸಿದರು.
ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ, ಪ್ರಪಂಚದಾದ್ಯಂತ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಉತ್ತಮ ಆರೋಗ್ಯಕ್ಕಾಗಿ ಯೋಗ ಮತ್ತು ನಡಿಗೆ ಬೇಕಿದೆ. ಇಂಥ ಜಾಗೃತಿ ಕಾರ‌್ಯಕ್ರಮಗಳು ಇತರರಿಗೆ ಪ್ರೇರಣೆಯಾಗಲಿದೆ ಎಂದರು.
ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಯೋಗ ಭಾರತದ ಸಂಸ್ಕೃತಿ ಪ್ರತೀಕ. ದೇಹ ಮತ್ತು ಮನಸ್ಸು ಒಂದಾಗುವ ಪ್ರಕ್ರಿಯೆಯೇ ಯೋಗ. ಅದಕ್ಕೆ ಇಂದಿನ ಯೋಗ ನಡಿಗೆಯೇ ಸಾಕ್ಷಿ ಎಂದು ತಿಳಿಸಿದರು.
ಡಿಸಿಸಿ ಅಧ್ಯಕ್ಷ ಎಂ.ಕೆ.ತಾಜಪೀರ್ ಮಾತನಾಡಿ, ಯೋಗ ಒಂದು ದಿನಕ್ಕೆ ಸೀಮಿತ ಆಗಬಾರದು. ನಿತ್ಯವೂ ಇಂತಹ ಉತ್ತಮ ಹವ್ಯಾಸ ರೂಢಿಸಿಕೊಳ್ಳಬೇಕು. ನಮ್ಮ ಆರೋಗ್ಯ ನಮ್ಮ ಕೈಲಿದೆ. ದುಶ್ಚಟಗಳು ನಮ್ಮನ್ನು ಅನಾರೋಗ್ಯದ ಕಂದಕಕ್ಕೆ ತಳ್ಳುತ್ತವೆ ಎಂದು ಎಚ್ಚರಿಸಿದರು.
ಜಿಪಂ ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ ಮಾತನಾಡಿದರು. ಯೋಗ ನಡಿಗೆಗೆ ಕಬೀರಾನಂದಾಶ್ರಮದ ಶ್ರೀ ಶಿವಲಿಂಗಾನಂದ ಸ್ವಾಮೀಜಿ ಚಾಲನೆ ನೀಡಿದರು.
ಶ್ರೀ ಬಸವಪ್ರಭು ಸ್ವಾಮೀಜಿ, ಶ್ರೀ ಬಸವ ನಾಗಿದೇವ ಸ್ವಾಮೀಜಿ, ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಶ್ರೀ ಶಾಂತವೀರ ಗುರು ಮುರುಘರಾಜೇಂದ್ರ ಸ್ವಾಮೀಜಿ, ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಶ್ರೀ ಶಿವಾನಂದ ಸ್ವಾಮೀಜಿ, ಶ್ರೀ ಇಮ್ಮಡಿ ಬಸವ ಕೇತೇಶ್ವರ ಸ್ವಾಮೀಜಿ, ಶ್ರೀ ಕುಂಬಾರ ಗುಂಡಯ್ಯ ಸ್ವಾಮೀಜಿ, ಶ್ರೀ ತಿಪ್ಪೇರುದ್ರ ಸ್ವಾಮೀಜಿ, ಸಂಸದ ಗೋವಿಂದ ಎಂ.ಕಾರಜೋಳ, ನಗರಸಭೆ ಆಯುಕ್ತೆ ಎಂ.ರೇಣುಕಾ, ಕೆಇಬಿ ಷಣ್ಮುಖಪ್ಪ, ಸುರೇಶ್‌ಬಾಬು, ಸಿದ್ದವ್ವನಹಳ್ಳಿ ಪರಮೇಶ್, ಡಿ.ಎಸ್.ಮಲ್ಲಿಕಾರ್ಜುನ್, ಪಿ.ವೀರೇಂದ್ರಕುಮಾರ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ನಗರದ ನೀಲಕಂಠೇಶ್ವರಸ್ವಾಮಿ ದೇವಾಲಯದಿಂದ ಆರಂಭವಾದ ನಡಿಗೆ ವೀರ ವನಿತೆ ಒನಕೆ ಓಬವ್ವ ವೃತ್ತದ ಬಳಿ ಸಮಾಪನಗೊಂಡಿತು.
*ಯೋಗ ದಿನಾಚರಣೆ 21ರಂದು
ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಪಂ ಹಾಗೂ ವಿವಿಧ ಯೋಗ ಸಂಸ್ಥೆಗಳ ಆಶ್ರಯದಲ್ಲಿ ಜೂ.21ರ ಬೆಳಗ್ಗೆ 7 ಗಂಟೆಗೆ ಚಿತ್ರದುರ್ಗದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ 10 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಏರ್ಪಡಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸಲಿದ್ದು, ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಸಂಸದ ಗೋವಿಂದ ಎಂ.ಕಾರಜೋಳ ಇತರರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ ತಿಳಿಸಿದ್ದಾರೆ.