

ಮುಂಡರಗಿ: ಮಲೆನಾಡಿನ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ತುಂಗಭದ್ರಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ತಾಲೂಕಿನ ಸಿಂಗಟಾಲೂರು ಬ್ಯಾರೇಜ್‌ಗೆ ಒಳಹರಿವು ಹೆಚ್ಚಳವಾಗುತ್ತಿದ್ದು, ಸೋಮವಾರ ಬ್ಯಾರೇಜ್‌ನ 26 ಗೇಟ್‌ಗಳ ಪೈಕಿ ಸದ್ಯ 6 ಗೇಟ್‌ಗಳ ಮೂಲಕ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ.
ಸಿಂಗಟಾಲೂರು ಬ್ಯಾರೇಜ್‌ನಿಂದ ಜು.7ರಂದು 20,658 ಕ್ಯೂಸೆಕ್ ನೀರನ್ನು ತುಂಗಭದ್ರಾ ನದಿಗೆ ಹರಿಬಿಡಲಾಗಿತ್ತು. 8ರಂದು 23,483 ಕ್ಯೂಸೆಕ್ ನೀರನ್ನು 6 ಗೇಟ್‌ಗಳ ಮೂಲಕ ಹೊರ ಬಿಡಲಾಗಿದೆ. ಈ ಬ್ಯಾರೇಜ್ 3.12 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಹಿನ್ನೀರಿನಿಂದ ಗುಮ್ಮಗೋಳ, ಬಿದರಹಳ್ಳಿ, ವಿಠಲಾಪುರ ಮತ್ತು ಹೂವಿನಹಡಗಲಿ ತಾಲೂಕಿನ ಅಲ್ಲಿಪುರ ಗ್ರಾಮಗಳು ಮುಳುಗಡೆ ಪ್ರದೇಶಕ್ಕೆ ಒಳಪಟ್ಟಿವೆ. ನಾಲ್ಕು ಗ್ರಾಮಗಳನ್ನು ಇದುವರೆಗೂ ಸಂಪೂರ್ಣವಾಗಿ ಸ್ಥಳಾಂತರಿಸದ ಕಾರಣ ಬ್ಯಾರೇಜ್‌ನಲ್ಲಿ ್ಯ 1.94 ಟಿಎಂಸಿ ನೀರು ಮಾತ್ರ ಸಂಗ್ರಹಿಸಲಾಗುತ್ತಿದೆ. ಹೆಚ್ಚುವರಿ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ.
ಜು.6ರಂದು ಒಳಹರಿವು ಹೆಚ್ಚಿದ ಹಿನ್ನೆಲೆಯಲ್ಲಿ 45,732ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗಿತ್ತು. ಮರುದಿನ ಒಳಹರಿವು ಇಳಿಕೆ ಕಂಡಿತ್ತು. ಈಗ ಮತ್ತೆ ಏರಿಕೆ ಕಾಣಿಸಿಕೊಂಡಿದೆ. ಸುಮಾರು 1.50 ಲಕ್ಷ ಕ್ಯೂಸೆಕ್‌ಗೂ ಹೆಚ್ಚು ಪ್ರಮಾಣದಲ್ಲಿ ನೀರು ಹರಿದು ಬಂದರೆ ಮುಳುಗಡೆ ಪ್ರದೇಶಕ್ಕೆ ಒಳಪಡುವ ಗ್ರಾಮಗಳಲ್ಲಿ ಪ್ರವಾಹ ಸಮಸ್ಯೆ ಎದುರಾಗುವ ಸಾಧ್ಯತೆ ಹೆಚ್ಚಿರುತ್ತದೆ. ಆದರೆ ಸದ್ಯ ಅಷ್ಟು ಪ್ರವಾಹದ ಸಾಧ್ಯತೆ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.