23 ಕುಟುಂಬಗಳಿಗೆ ಮನೆ ಹಕ್ಕುಪತ್ರ ವಿತರಣೆ

27 CRP 01
Published on

ಚನ್ನರಾಯಪಟ್ಟಣ: ತಿಮ್ಮಲಾಪುರ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಿಸಲು ಶೀಘ್ರದಲ್ಲಿಯೇ ಸೂಕ್ತ ಜಾಗವನ್ನು ಗುರುತಿಸಲಾಗುವುದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.

ತಾಲೂಕಿನ ತಿಮ್ಮಲಾಪುರ ಗ್ರಾಮದಲ್ಲಿ ತಾಲೂಕು ಆಡಳಿತದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಮನೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸುಮಾರು 20 ಗುಂಟೆ ಜಾಗವನ್ನು ಸಾರ್ವಜನಿಕ ಉದ್ದೇಶಕ್ಕೆಂದು ಕಾಯ್ದಿರಿಸಲು ಕಂದಾಯ ಇಲಾಖೆಗೆ ಸೂಚಿಸಲಾಗಿದೆ ಎಂದರು.

ಕಿರೀಸಾವೆ ಗಡಿಯಿಂದ ತಿಮ್ಮಲಾಪುರವರೆಗಿನ ರಸ್ತೆಯನ್ನು 50 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಗ್ರಾಮದ ಪ್ರಮುಖ ಬೀದಿಗಳಲ್ಲಿ 300 ಮೀಟರ್ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಅನುದಾನ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ತಹಸೀಲ್ದಾರ್ ಬಿ.ಎಂ.ಗೋವಿಂದರಾಜ್ ಮಾತನಾಡಿ, 94ಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದ 31ರ ಪೈಕಿ 23 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಗಿದ್ದು, ಉಳಿದ 8 ಅರ್ಜಿಗಳಲ್ಲಿ ತಾಂತ್ರಿಕ ಸಮಸ್ಯೆ ಇರುವುದರಿಂದ ಅದನ್ನು ಬಗೆಹರಿಸಿ ವಾರಾಂತ್ಯದಲ್ಲಿ ವಿತರಿಸಲಾಗುವುದು ಎಂದು ಭರವಸೆ ನೀಡಿದರು.

ಬಾಳಗಂಚಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜೇಗೌಡ, ಮಾಜಿ ಅಧ್ಯಕ್ಷ ಜಗದೀಶ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಅನಿತಾ ಕುಮಾರಸ್ವಾಮಿ, ಬಗರ್ ಹುಕುಂ ಸಮಿತಿಯ ಸದಸ್ಯರಾದ ಛಾಯಾಕೃಷ್ಣ, ಬಸವರಾಜು, ರವಿಕುಮಾರ್, ಶಿರಸ್ತೇದಾರ್ ಮಂಜೇಗೌಡ, ಆರ್‌ಐ ವೀರಾಜ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net