

ಹೊಸಪೇಟೆ: ರಾಯಚೂರಿನ ಶ್ರೀ ವೀರಶೈವ ಲಿಂಗಾಯತ ಕಲ್ಯಾಣ ಮಂಟಪದಲ್ಲಿ ಸೆ.23 ರಂದು ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಡಿ.ದೇವರಾಜ ಅರಸು ಅವರ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಸಾಮಾಜಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂಘ ಅಧ್ಯಕ್ಷ ಸೈದಪ್ಪ ಕೆ.ಗುತ್ತೇದಾರ್ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಅಂದು ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಉದ್ಘಾಟಿಸುವರು.
ಈ ಭಾಗದ ಸಚಿವರು ಮತ್ತು ಶಾಸಕರು ಮುಖ್ಯಅತಿಥಿಯಾಗಿ ಪಾಲ್ಗೊಳ್ಳುವರು. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 10 ಜನರಿಗೆ ಹಿಂದುಳಿದ ವರ್ಗಗಳ ರತ್ನ ಡಿ.ದೇವರಾಜ ಅರಸು ರಾಜ್ಯ ಪ್ರಶಸ್ತಿ ನೀಡಿ, ಗೌರವಿಸಲಾಗುತ್ತದೆ ಎಂದು ವಿವರಿಸಿದರು.
ಇತ್ತೀಚೆಗೆ ಪ್ರಬಲ ಸಮುದಾಯಗಳ ಹೆಸರಲ್ಲಿ ಸ್ಥಾಪಿಸಿರುವ ಅಭಿವೃದ್ಧಿ ನಿಗಮಗಳಿಗೆ ಸರ್ಕಾರ ನೂರಾರು ಕೋಟಿ ರೂ. ಅನುದಾನ ಬಿಡುಗಡೆ ಮಾಡುತ್ತದೆ.
ಆದರೆ, 197 ಸಮುದಾಯಗಳನ್ನು ಹೊಂದಿರುವ ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮಕ್ಕೆ ಅಲ್ಪಸ್ವಲ್ಪ ಎಂಬಂತೆ ಅನುದಾನ ನೀಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, 197 ಸಮುದಾಯಗಳಿಗೂ ಪ್ರತ್ಯೇಕ ನಿಗಮ ಸ್ಥಾಪಿಸಿ, ಕನಿಷ್ಠ 1 ಸಾವಿರ ಕೋಟಿ ರೂ. ನೀಡಬೇಕು.
ಚುನಾವಣೆಯಲ್ಲಿ ಎಸ್ಸಿ, ಎಸ್ಟಿ ಮಾದರಿಯಲ್ಲಿ ಒಬಿಸಿಗೂ ಪ್ರತ್ಯೇಕ ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ವೈ.ಯಮುನೇಶ ಮಾತನಾಡಿ, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸಲು ಕಾನೂನು ಚೌಕಟ್ಟಿನಲ್ಲಿ ಅವಕಾಶವಿಲ್ಲ. ಅವರಿಗೆ ಬೇರೆ ಪರಿಧಿಯಲ್ಲಿ ಸೌಲಭ್ಯ ಒದಗಿಸಿದರೆ, ನಮ್ಮ ತಕರಾರು ಇಲ್ಲವೆಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ನಗರಸಭೆ ಉಪಾಧ್ಯಕ್ಷ ಎನ್.ರೂಪೇಶ ಕುಮಾರ್, ಬ್ರಹ್ಮರ್ಷಿ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ಈ.ಯರಿಸ್ವಾಮಿ, ಉಪ್ಪಾರ ಸಮಾಜದ ತಾಲೂಕು ಅಧ್ಯಕ್ಷ ಯು.ಆಂಜನೇಯಲು ಇದ್ದರು.