24ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ: ಉದ್ಘಾಟನೆ, ಶಂಕುಸ್ಥಾಪನೆಗೆ ಕ್ರಮ ವಹಿಸಲು ಡಿಸಿ ಸೂಚನೆ

24ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ: ಉದ್ಘಾಟನೆ, ಶಂಕುಸ್ಥಾಪನೆಗೆ ಕ್ರಮ ವಹಿಸಲು ಡಿಸಿ ಸೂಚನೆ
Published on

ಹಾಸನ: ಜಿಲ್ಲೆಯಲ್ಲಿ ಈಗಾಗಲೇ ಪೂರ್ಣಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವ ಸಂಬಂದ ಅಗತ್ಯ ಕ್ರಮವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಅವರು ಸೂಚನೆ ನೀಡಿದರು.
ಫೆ.24 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಚನ್ನಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ವಿಹಾರ ಧಾಮ, ಅರಸೀಕೆರೆ ತಾಲೂಕಿನ ಮಾಲೆಕಲ್ ತಿರುಪತಿಯಲ್ಲಿ ನಿರ್ಮಿಸಿರುವ ಯಾತ್ರಿ ನಿವಾಸ, ಅಬಕಾರಿ ಇಲಾಖೆ ಕಚೇರಿ ಕಟ್ಟಡ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕಟ್ಟಡಗಳ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವಿವಿಧ ಅಭಿವೃದ್ಧಿ ನಿಗಮಗಳು ಹಾಗೂ ವಿವಿಧ ಇಲಾಖೆಗಳಲ್ಲಿ ಸವಲತ್ತು ವಿತರಣೆಗೆ ಆಯ್ಕೆ ಆಗಿರುವ ಫಲಾನುಭವಿಗಳ ಪಟ್ಟಿ ತಯಾರಿಸಿ ಎಂದು ತಿಳಿಸಿದರಲ್ಲದೆ, ಹೊಸದಾಗಿ ರಚನೆಯಾಗಿರುವ ಕಂದಾಯ ಗ್ರಾಮಗಳಿಗೆ ಹಕ್ಕು ಪತ್ರ ವಿತರಣೆಗೆ ಕ್ರಮವಹಿಸಲು ತಿಳಿಸಿದರು. ಪೌರ ಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ನಿರ್ಮಿಸುತ್ತಿರುವ 41 ಮನೆಗಳನ್ನು ಪೂರ್ಣಗೊಳಿಸಿ ಗುಣಮಟ್ಟಕ್ಕೆ ಹೆಚ್ಚಿನ ಒತ್ತು ನೀಡಿ ಎಂದರು.
ನಗರದ ರಸ್ತೆಗಳ ಗುಂಡಿ ಮುಚ್ಚುವ ಜತೆಗೆ ನಗರ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ನಗರೋತ್ಥಾನ, ಇಂದಿರಾ ಕ್ಯಾಂಟಿನ್, ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚು ಒತ್ತು ನೀಡಿ ಶೇ.100 ರಷ್ಟು ಗುರಿ ಸಾಧಿಸುವಂತೆ ಸೂಚಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.26, 27ರಂದು ನಡೆಯುವ ಬೃಹತ್ ಉದ್ಯೋಗ ಮೇಳದಲ್ಲಿ ಜಿಲ್ಲೆಯ ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳುವಂತೆ ಪ್ರಚಾರ ನೀಡುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಬಿ.ಆರ್.ಪೂರ್ಣಿಮಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಬ್ ಕುಮಾರ್, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು ಉಪಸ್ಥಿತರಿದ್ದರು. ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net