25 ರಂದು ಶಿವರಾತ್ರಿ ರಾಜೇಂದ್ರ ಶ್ರೀ 109ನೇ ಜಯಂತಿ

Dr-Sri-Shivarathri-Rajendra-Mahaswamiji
Published on

ಮೈಸೂರು: ಸುತ್ತೂರು ಜಗದ್ಗುರು ಶ್ರೀ ವೀರ ಸಿಂಹಾಸನ ಮಹಾಸಂಸ್ಥಾನ ಮಠದ 23ನೇ ಪೀಠಾಧಿಪತಿ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ 109ನೇ ಜಯಂತಿಯನ್ನು ಆ.25ರಂದು 10.30ಕ್ಕೆ ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಮಂಜುನಾಥ್ ತಿಳಿಸಿದರು.
ಗೋವಾ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೈ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮೇಘಾಲಯ ರಾಜ್ಯಪಾಲ ಸಿ.ಎಚ್.ವಿಜಯಶಂಕರ್ ಅಧ್ಯಕ್ಷತೆ ವಹಿಸುವರು. ಮುದ್ದೇನಹಳ್ಳಿ ಸತ್ಯಸಾಯಿ ಆಶ್ರಮದ ಸದ್ಗುರು ಮಧುಸೂದನ ಸಾಯಿ, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಧ್ಯಾಹ್ನ 3 ಗಂಟೆಗೆ ಜೆಎಸ್‌ಎಸ್ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರಿಗೆ ಪ್ರತಿ ವರ್ಷದಂತೆ ಈ ವರ್ಷವೂ ಅಭಿನಂದನೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಬಾರಿ ಸುಮಾರು 102 ಜನ ನಿವೃತ್ತರಾಗಿದ್ದಾರೆ. 63 ಜನ ಕೆಲಸದಿಂದ ಬಿಡುಗಡೆ ಪಡೆದಿದ್ದಾರೆ. 12 ಜನ ಸೇವೆಯಲ್ಲಿರುವಾಗಲೇ ಮೃತಪಟ್ಟಿದ್ದು ಅವರ ಕುಟುಂಬದವಿಗೆ ಸಾಂತ್ವನ ಹೇಳಿ, ನಿವೃತ್ತರಾದವರನ್ನು ಅಭಿನಂದಿಸಲಾಗುತ್ತದೆ. ಜತೆಗೆ ಜೆಎಸ್‌ಎಸ್ ವಿದ್ಯಾಸಂಸ್ಥೆಗಳಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ ಎಂದರು.
ಜೆಎಸ್‌ಎಸ್ ಶಾಲಾ ಕಾಲೇಜುಗಳ ಉತ್ತಮ ವಾರ್ಷಿಕ ಸಂಚಿಕೆಗಳಿಗೆ ಹಾಗೂ ಪ್ರಸಾದ ಮಾಸಿಕ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗುತ್ತದೆ. ಜೆಎಸ್‌ಎಸ್ ಪ್ರಸಾದ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ವಿದ್ಯಾರ್ಥಿನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತರಿಗೆ ವಿದ್ಯಾರ್ಥಿವೇತನ ನೀಡಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net