

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಫುಟ್‌ಬಾಲ್ ಸಂಸ್ಥೆಯ 26ನೇ ಇಂಡಿಪೆಂಡೆನ್ಸ್ ಕಪ್ ಫುಟ್‌ಬಾಲ್ ಟೂರ್ನಿ ನಗರದ ನೆಹರೂ (ಫುಟ್ಬಾಲ್) ಮೈದಾನದಲ್ಲಿ ಗುರುವಾರ ಆರಂಭಗೊಂಡಿತು.
ಟೂರ್ನಿಗೆ ಚಾಲನೆ ನೀಡಿ ಮಾತನಾಡಿದ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು, ನೆಹರು ಮೈದಾನದ ಅಭಿವೃದ್ಧಿಗಾಗಿ ಸ್ಮಾರ್ಟ್ ಸಿಟಿ ಯೋಜನೆಯಡಿ ಅನುದಾನ ಮೀಸಲಿಡಲಾಗಿದೆ ಎಂದರು.
26 ವರ್ಷಗಳಿಂದ ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ ಫುಟ್ಬಾಲ್ ಟೂರ್ನಿಗೆ ಪ್ರೋತ್ಸಾಹಧನ ನೀಡಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಅವರು ಭರವಸೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲಾ ಫುಟ್‌ಬಾಲ್ ಸಂಸ್ಥೆಯ ಅಧ್ಯಕ್ಷ ಡಿ.ಎಂ. ಅಸ್ಲಾಂ ಪ್ರಸ್ತಾವನೆಗೈದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜ, ಮಹಾನಗರಪಾಲಿಕೆ ಸದಸ್ಯರಾದ ದಿವಾಕರ್, ರವೂಫ್, ಅಬ್ದುಲ್ ಲತೀಫ್, ಉದ್ಯಮಿಗಳಾದ ಆಜಾದ್ ಮನ್ಸೂರ್ ಮತ್ತು ಅಬ್ದುಲ್ ಅಮೋನ್ ಇದ್ದರು.
ಟೂರ್ನಿ ಅವಧಿಯಲ್ಲಿ ಪ್ರತಿದಿನ ಬೆಳಗ್ಗೆ 9 ರಿಂದ ಸಂಜೆ 6ರ ವರೆಗೆ ಪಂದ್ಯಗಳು ನಡೆಯಲಿದ್ದು, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ, ಪದವಿ ಕಾಲೇಜು ವಿದ್ಯಾರ್ಥಿಗಳ ತಂಡಗಳು ಸೆಣಸಲಿವೆ.