

ತಿ.ನರಸೀಪುರದಲ್ಲಿ ನಡೆದ ಪ್ರತಿಭಟನೆ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಒಡೆಯುವ ಮೂಲಕ ಅಪಮಾನಿಸಿರುವ ಆರ್.ಭಾಸ್ಕರ್ ಪ್ರಸಾದ್ ಹಾಗೂ ಅರುಣ್‌ಕುಮಾರ್ ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಅ.27ರಂದು ಬೆಳಗ್ಗೆ 11ಕ್ಕೆ ಎಸ್‌ಪಿ ಕಚೇರಿ ಬಳಿ ದಲಿತ ಮಹಾಸಭಾ ಹಾಗೂ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ತಮಟೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ತಿಳಿಸಿದರು.
ಈ ಇಬ್ಬರನ್ನು ಜಿಲ್ಲೆಯಿಂದ ಗಡಿಪಾರು ಮಾಡಬೇಕು. ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಒಳ ಮೀಸಲಾತಿ ವಿಷಯದಲ್ಲಿ ಅನ್ಯಾಯವಾಗಿದ್ದರೆ ಸರ್ಕಾರದ ಮುಂದೆ ಹಾಗೂ ನ್ಯಾಯಾಲಯದಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಬಹುದಾಗಿದೆ. ಆದರೆ, ಇವರು ಬಿಜೆಪಿ ಕುತಂತ್ರಕ್ಕೆ ಒಳಗಾಗಿ ಎಚ್.ಸಿ.ಮಹದೇವಪ್ಪ ಹಾಗೂ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಕಿಡಿಕಾರಿದರು.