

ಹಾಸನ: ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಅ.27 ರಿಂದ ಅ.29ವರೆಗೆ ತುಮಕೂರಿನಲ್ಲಿ ನಡೆಯಲಿದೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಈ. ಕೃಷ್ಣೆಗೌಡ ತಿಳಿಸಿದರು.
ಹಾಸನ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಜ.11 ಮತ್ತು 12 ರವರೆಗೆ ನಡೆಸಲಾಗಿತ್ತು. ಈ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಅರ್ಹತೆ ಪಡೆದ ಕ್ರೀಡಾಪಟುಳಿಗೆ ಅ.27ರಿಂದ ಅ.29ರವರೆಗೆ ರಾಜ್ಯಮಟ್ಟದ ಕ್ರೀಡಾಕೂಟವನ್ನು ತುಮಕೂರಿನಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಹಾಗೂ ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಈಗಾಗಲೇ ಆನ್‌ಲೈನ್‌ನಲ್ಲಿ ನೋಂದಣಿಯಾಗಿರುವ ನೌಕರರು ನೇರವಾಗಿ ತಮ್ಮ ಯಾವುದಾದರೂ ಐಡಿ ಕಾರ್ಡ್‌ನೊಂದಿಗೆ ನೋಂದಣಿ ಮಾಡಿಕೊಳ್ಳಬೇಕು. ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಪಟುಗಳು ವಿಶೇಷ ಸಾಂದರ್ಭಿಕ ರಜೆ ಪಡೆಯಲು ಅವಕಾಶವಿದೆ. ಹಾಗೂ ಮಾತೃ ಇಲಾಖೆಯಿಂದ ಪ್ರವಾಸ ಭತ್ಯೆ ಪಡೆಯಬಹುದು. ಸ್ಪರ್ಧೆಯಲ್ಲಿ ಭಾಗವಹಿಸುವವರು ಅ.27ರಂದು ಮಧ್ಯಾಹ್ನ 1 ಗಂಟೆಯೊಳಗಾಗಿ ತುಮಕೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.