29ಕ್ಕೆ ಜಿಲ್ಲಾಧಿಕಾರಿ ನಡೆ-ಹಳ್ಳಿ ಕಡೆಗೆ, ಹಾರೋಹಳ್ಳಿ ಗ್ರಾಮ ಪಂಚಾಯಿತಿ ಆಯ್ಕೆ

1f50025c-e83b-4d3a-97b0-f8af990fa6f4
Published on

ಬೆಂಗಳೂರು: ಕಂದಾಯ ಸಚಿವ ಆರ್.ಅಶೋಕ್ ನಿರ್ದೇಶನದಂತೆ, ಸಾರ್ವಜನಿಕರ ಕುಂದುಕೊರತೆ ಆಲಿಸಿ ಸ್ಥಳದಲ್ಲೇ ಸಮಸ್ಯೆ ಬಗೆಹರಿಸುವ ಜಿಲ್ಲಾಧಿಕಾರಿ ನಡೆ-ಹಳ್ಳಿ ಕಡೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಫೆ.29 ರಂದು ದೇವನಹಳ್ಳಿ ತಾಲೂಕಿನ ಹಾರೋಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಮೊದಲ ಕಾರ್ಯಕ್ರಮ ನಡೆಯಲಿದೆ ಎಂದು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.

ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ನಡೆ-ಹಳ್ಳಿ ಕಡೆಗೆ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆ ಸಭೆಯಲ್ಲಿ ಮಾತನಾಡಿದರು. ಕಾರ್ಯಕ್ರಮವನ್ನು ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಹಾರೋಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ 5 ಗ್ರಾಮಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಹಾರೋಹಳ್ಳಿಯಲ್ಲಿ 352 ಕುಟುಂಬ, ಬುಳ್ಳಹಳ್ಳಿಯಲ್ಲಿ 177, ತಿಮ್ಮಹಳ್ಳಿಯಲ್ಲಿ 136, ದೊಡ್ಡಮುದ್ದೇನಹಳ್ಳಿಯಲ್ಲಿ 70, ಚಿಕ್ಕೇನಹಳ್ಳಿಯಲ್ಲಿ 249 ಸೇರಿ ಒಟ್ಟು 964 ಕುಟುಂಬ ವಾಸವಿರುವ ಬಗ್ಗೆ ಮಾಹಿತಿ ಪಡೆಯಲಾಗಿದೆ. ಎಲ್ಲಾ ಇಲಾಖೆ ಅಧಿಕಾರಿಗಳು ಒಳಗೊಂಡಂತೆ ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮ ಪ್ರಥಮ ಪ್ರಯೋಗವಾಗಿ ಹಾರೋಹಳ್ಳಿ ಗ್ರಾಮದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಲಾಗುವುದು ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ದೊರಕಿಸಿಕೊಡಲಾಗುವುದು ಎಂದು ತಿಳಿಸಿದರು.

ಅಧಿಕಾರಿಗಳಿಗೆ ಸೂಚನೆ: ಎಲ್ಲಾ ಇಲಾಖೆಗಳು, ನಿಗಮಗಳು ವಿವಿಧ ಯೋಜನೆಗಳ ಕುರಿತ ಮಾಹಿತಿಯುಳ್ಳ ವಸ್ತು ಪ್ರದರ್ಶನ, ಕರಪತ್ರ ಹಂಚುವಿಕೆ, ಬೀದಿನಾಟಕ ಪ್ರದರ್ಶನ, ಆರೋಗ್ಯ ತಪಾಸಣಾ ಶಿಬಿರ ನಡೆಸಲು ಹಾಗೂ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಜಗದೀಶ್.ಕೆ.ನಾಯಕ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಕರಿಯಪ್ಪ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net