ಮಾರ್ಚ್‌ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-ಸಿದ್ಧತೆ ಪ್ರಾರಂಭಿಸಿದ ಅಧಿಕಾರಿಗಳು

2nd puc exam meeting.
Published on

ಕಾರವಾರ: ಮಾರ್ಚ್ 1 ರಿಂದ 22 ರವರೆಗೆ ಜಿಲ್ಲೆಯ 31 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 14,401 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿದ್ದಾರೆ.
ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಿ, ಪರೀಕ್ಷಾ ಸಿದ್ಧತೆಯ ಬಗ್ಗೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು. ಎಲ್ಲ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು. ವಿದ್ಯಾರ್ಥಿಗಳು ಸ್ಮಾರ್ಟ್ ವಾಚ್, ಮೊಬೈಲ್ ಮುಂತಾದ ಇಲೆಕ್ಟ್ರಾನಿಕ್ಸ್‌ ವಸ್ತುಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವ ಮುನ್ನವೇ ಈ ಬಗ್ಗೆ ಪರಿಶೀಲನೆ ನಡೆಸುವ ವ್ಯವಸ್ಥೆಯಾಗಬೇಕು ಎಂದು ಡಿಸಿ ಸೂಚನೆ ನೀಡಿದರು.
ಪರೀಕ್ಷೆಗೆ ಬರುವ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿದರೆ ಪರೀಕ್ಷೆಗೆ ಬರಲು ಮತ್ತು ವಾಪಸ್ ಹೋಗಲು ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ವ್ಯವಸ್ಥೆ ಮಾಡಲಾಗಿದೆ. ಬಸ್‌ಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದರು. ಪ್ರತಿ ಕೇಂದ್ರಗಳಲ್ಲಿ ಪ್ರಥಮ ಚಿಕಿತ್ಸಾ ಕಿಟ್ ವ್ಯವಸ್ಥೆ ಮಾಡಬೇಕು. ಆರೋಗ್ಯ ಸಿಬ್ಬಂದಿ ನಿಯೋಜನೆ ಮಾಡಬೇಕು. ಪರೀಕ್ಷೆಯಲ್ಲಿ ನಕಲು ನಡೆಯಬಾರದು, ಸಂಪೂರ್ಣ ಪಾರದರ್ಶಕವಾಗಿ ನಡೆಯಲು ಕ್ರಮ ವಹಿಸಬೇಕು ಎಂದು ಸೂಚಿಸಿದರು. ಎಡಿಸಿ ಪ್ರಕಾಶ ರಜಪೂತ, ಪ್ರಭಾರ ಡಿಡಿಪಿಯು ಸತೀಶ ನಾಯ್ಕ, ಡಿಡಿಪಿಐ ಲತಾ ನಾಯ್ಕ ಹಾಗೂ ಇತರ ಅಧಿಕಾರಿಗಳು ಸಭೆಲ್ಲಿದ್ದರು.

ಜಿಪಿಎಸ್ ಅಳವಡಿಕೆ
ಪ್ರಶ್ನೆಪತ್ರಿಕೆ ಬಂಡಲ್‌ಗಳನ್ನು ಖಜಾನೆಯಿಂದ ಪಡೆಯುವಾಗ ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅವುಗಳನ್ನು ತೆರೆಯುವಾಗ ವೀಡಿಯೋ ಚಿತ್ರೀಕರಣ ಮಾಡಬೇಕು. ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆ ಸಾಗಾಟ ವಾಹನಗಳಿಗೆ ಜಿ.ಪಿ.ಎಸ್ ಅಳವಡಿಕೆ ಮಾಡಬೇಕು. ಪರೀಕ್ಷಾ ಕೇಂದ್ರಗಳಿಗೆ ಮತ್ತು ಭದ್ರತಾ ಕೊಠಡಿಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಸೂಚಿಸಿದರು. ಕೇಂದ್ರಗಳ ಸುತ್ತ 200 ಮೀ ವ್ಯಾಪ್ತಿಯಲ್ಲಿ ಪರೀಕ್ಷೆ ನಡೆಯುವಾಗ ಸೆಕ್ಷನ್ 144 ಜಾರಿ ಮಾಡಲಾಗುವುದು ಎಂದು ಡಿಸಿ ಗಂಗೂಬಾಯಿ ಮಾನಕರ್ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net