

ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ದಾಸರಹಳ್ಳಿಯ ಭೈರವವೇಶ್ವರ ಕೈಗಾರಿಕಾ ಪ್ರದೇಶದಲ್ಲಿ ಪ್ಲಾಸ್ಟಿಕ್ ಗೋಡನ್ ಮೇಲೆ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ 3.5 ಟನ್ ಪ್ರಮಾಣದ ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಸೋಮವಾರ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಇದೇ ಮೊದಲ ಬಾರಿಗೆ ದೊಡ್ಡ ಪ್ರಮಾಣದ ಏಕ ಬಳಕೆ ಪ್ಲಾಸ್ಟಿಕ್‌ಅನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಗೋದಾಮು ಮಾಲೀಕನಿಗೆ 1.5 ಲಕ್ಷ ರೂ. ದಂಡ ವಿಧಿಸಲಾಗಿದೆ. ನಿಷೇಧಿತ ಪ್ಲಾಸ್ಟಿಕ್‌ಅನ್ನು ಮತ್ತೆ ಸಂಗ್ರಹಿಸಿ ಮಾರಾಟ ಮಾಡಿದ್ದಲ್ಲಿ ಪರವಾನಗಿ ರದ್ದು ಮಾಡುವ ಎಚ್ಚರಿಕೆ ನೀಡಲಾಗಿದೆ.
ವರ್ಷಾಂತ್ಯಕ್ಕೆ ಮೇಲ್ಸೇತುವೆ ಪೂರ್ಣಕ್ಕೆ ಗಡುವು:
ಯಲಹಂಕ ಸಮೀಪದ ಜಕ್ಕೂರು ಗ್ರಾಮದಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ನಿಧಾನವಾಗಿ ಸಾಗುತ್ತಿರುವುದರ ಬಗ್ಗೆ ಮಾಹಿತಿ ಪಡೆದು ಉತ್ತರ ಪಾಲಿಕೆಯ ಆಯುಕ್ತ ಪಿ.ಸುನೀಲ್ ಕುಮಾರ್ ಸ್ಥಳಪರಿಶೀಲನೆ ನಡೆಸಿದರು. ಕಾಮಗಾರಿ ಪ್ರಗತಿಯಲ್ಲಿದ್ದು, ಭೂಸ್ವಾಧೀನ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಎರಡೂ ಕಡೆಯ ರಾಂಪ್ ಅನ್ನು 3 ತಿಂಗಳಲ್ಲಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ವೇಳೆ ರೈಲ್ವೇ ಸಮಾಂತರ ರಸ್ತೆಯ ಎಂಸಿಇಸಿಎಚ್‌ಎಸ್ ಹಂತ-2, ಮೇಸ್ತ್ರಿಪಾಳ್ಯ - ರಾಚೇನಹಳ್ಳಿ ಲಿಂಕ್ ರಸ್ತೆಗಳಲ್ಲಿ ಡಾಂಬರೀಕರಣ ಮತ್ತು ಎರಡೂ ಬದಿಯ ಚರಂಡಿ ಕಾಮಗಾರಿ ಸ್ಥಳವನ್ನು ಪರಿಶೀಲಿಸಿ ಶೀಘ್ರ ಪೂರ್ಣಗೊಳಿಸಲು ಸೂಚಿಸಿದರು.
ಈ ವೇಳೆ ಜಂಟಿ ಆಯುಕ್ತ ಮೊಹ್ಮದ್ ನಯೀಮ್ ಮೊಮಿನ್, ಕಾರ್ಯಪಾಲಕ ಅಭಿಯಂತರರಾದ ಸುಧಾಕರ್, ನಾಗಪ್ಪ ಹಾಜರಿದ್ದರು.