3 ವರ್ಷದ ಬಾಕಿ ವೇತನ ನೀಡಿ

21Manju8_Web
ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರು ಬೆಳಗಾವಿ ಜಿಪಂ ಆವರಣದಲ್ಲಿ ಪ್ರತಿಭಟಿಸಿದರು. ವಿ.ಪಿ. ಕುಲಕರ್ಣಿ, ಜಿ.ಎಂ.ಜೈಖಾನ್, ಮಾರುತಿ ಮಾದರ ಇತರರಿದ್ದರು.
Published on

ಬೆಳಗಾವಿ: ಬಾಕಿ ವೇತನ, ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಕೈಬಿಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ವಿವಿಧ ಸಂಘಟನೆಗಳ ನೂರಾರು ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಹಾಗೂ ಜಿಪಂ ಕಚೇರಿ ಆವರಣದಲ್ಲಿ ಪ್ರತ್ಯೇಕವಾಗಿ ಸೋಮವಾರ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ನಗರದ ಜಿಪಂ ಕಚೇರಿ ಆವರಣದಲ್ಲಿ ರಾಜ್ಯ ಗ್ರಾಪಂ ನೌಕರರ ಸಂಘದ ನೇತೃತ್ವದಲ್ಲಿ ಗ್ರಾಪಂ ಸಿಬ್ಬಂದಿ ಪ್ರತಿಭಟನೆ ನಡೆಸಿದರು. ಬಾಕಿ ವೇತನ, ಸರ್ಕಾರದಿಂದ ಸಿಗುವ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿದರು. ಬಳಿಕ ಜಿಪಂ ಸಿಇಒ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮನವಿ ರವಾನಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಪಂ ಸಿಬ್ಬಂದಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಜತೆಗೆ ಕುಡಿಯುವ ನೀರು ಪೂರೈಕೆ, ಸ್ವಚ್ಛತೆ ಸೇರಿದಂತೆ ವಿವಿಧ ಕೆಲಸಗಳನ್ನು ಮಾಡುತ್ತಿದ್ದಾರೆ. ಆದರೆ, 2017 ರಿಂದ 2020ರ ವರೆಗೆ ಸಿಬ್ಬಂದಿಯ ಬಾಕಿ ವೇತನ ಬಿಡುಗಡೆ ಆಗಿಲ್ಲ. ಪರಿಣಾಮ ಈ ಸಿಬ್ಬಂದಿಗೆ ಕುಟುಂಬ ನಿರ್ವಹಣೆ ಮಾಡಲಾಗುತ್ತಿಲ್ಲ. ಈ ಕುರಿತು ಮೇಲಿಂದ ಮೇಲೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಸಿಬ್ಬಂದಿ ದೂರಿದರು. 14ನೇ ಹಣಕಾಸು ಯೋಜನೆಯಲ್ಲಿ ಬಾಕಿ ವೇತನ ಕೊಡಿಸಬೇಕು. ಸಿಬ್ಬಂದಿ ವೇತನಕ್ಕೆ ಕೊರತೆಯಾಗದಂತೆ 382 ಕೋಟಿ ರೂ. ಅನುದಾನವನ್ನು ಬೇರೊಂದು ಯೋಜನೆಗಳ ಮೂಲಕ ಕ್ರೋಢಿಕರಿಸಬೇಕು. ಕಂಪ್ಯೂಟರ್ ಆಪರೇಟರ್‌ಗಳಿಗೆ ಬಡ್ತಿ ನೀಡಲು ವೃಂದ ಮತ್ತು ನೇಮಕಾತಿಗಳಿಗೆ ತಿದ್ದುಪಡಿ ಮಾಡಬೇಕು ಎಂದು ಆಗ್ರಹಿಸಿದರು. ಸಂಘದ ಅಧ್ಯಕ್ಷ ವಿ.ಪಿ. ಕುಲಕರ್ಣಿ, ಕಾರ್ಯದರ್ಶಿ ಜಿ.ಎಂ. ಜೈಖಾನ್, ಮಾರುತಿ ಮಾದರ, ಶಿವಪ್ಪ ನಾಯಕ ಇದ್ದರು.

ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ ಬೇಡ

ಅಂಗನವಾಡಿ ಕೇಂದ್ರಗಳಲ್ಲಿಯೇ ಪೂರ್ವ ಪ್ರಾಥಮಿಕ ಶಾಲೆ ಆರಂಭಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸುವುದನ್ನು ಸರ್ಕಾರ ಕೈಬಿಡಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡಬೇಕು. ಸರ್ಕಾರಿ ಶಾಲೆಗಳಂತೆ ಪಠ್ಯ-ಪುಸ್ತಕ ಒದಗಿಸಬೇಕು. ಮಕ್ಕಳಿಗೆ ಸಮವಸ್ತ್ರ ನೀಡಬೇಕು. ಮಕ್ಕಳಿಗೆ ದಾಖಲಾತಿ ಮತ್ತು ವರ್ಗಾವಣೆ ಪತ್ರ ನೀಡುವಂತೆ ಆದೇಶಿಸಬೇಕು. 2019ರ ಗೌರವ ಧನ ನೀಡಬೇಕು ಎಂಬಿತ್ಯಾದಿ ಬೇಡಿಕೆ ಈಡೇರಿಸಲು ಮನವಿ ಮೂಲಕ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಾದ ವೈ.ಬಿ. ಶೀಗಿಹಳ್ಳಿ, ಮೀನಾಕ್ಷಿ ಕೊಟಗಿ, ಸುಜಾತಾ ಬೆಳಗಾಂವಕರ್ ಇನ್ನಿತರರು ಉಪಸ್ಥಿತರಿದ್ದರು.

ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಕೈಬಿಡಿ

ನೂತನ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಹಿಂಪಡೆಯುವುದು ಸೇರಿದಂತೆ ರೈತರಿಗೆ ಮಾರಕಾವಾಗುವ ಕಾಯ್ದೆ ಜಾರಿ ಮಾಡದಂತೆ ಆಗ್ರಹಿಸಿ ಭಾರತೀಯ ಕೃಷಿಕ ಸಮಾಜ ಸಂಘಟನೆ ನೇತೃತ್ವದಲ್ಲಿ ರೈತರು ನಗರದ ಜಿಲ್ಲಾಧಿಕಾರಿ ಕಚೇರಿ ಆವಣರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ನೂತನ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಕೇಂದ್ರ ಸರ್ಕಾರದ ಎಪಿಎಂಸಿ ಕಾಯ್ದೆ, ವಿದ್ಯುತ್ ಖಾಸಗೀಕರಣ ನೀತಿ ಹಿಂಪಡೆದುಕೊಳ್ಳಬೇಕು. ರೈತರ ಕಬ್ಬಿನ ಬಾಕಿ ಬಿಲ್ ಪಾವತಿಸಬೇಕು. ಪ್ರಸಕ್ತ ಸಾಲಿನ ಹಂಗಾಮಿನ ಕಬ್ಬಿನ ದರ ನಿಗದಿಪಡಿಸುವುದು ಸೇರಿದಂತೆ ಇನ್ನಿತರ ಪ್ರಮುಖ ಬೇಡಿಕೆ ಈಡೇರಿಸಲು ಆಗ್ರಹಿಸಿದರು. ಸಂಘಟನೆ ಅಧ್ಯಕ್ಷ ಸಿದಗೌಡ ಮೋದಗಿ, ಎಂ.ಎಂ. ಬೀರಣ್ಣವರ, ರವಿ ಪಾಟೀಲ, ಬಿ.ಎಂ. ಚಿಕ್ಕನಗೌಡರ, ಸೋಮು ಕವಡೆ, ಶ್ರೀಧರ ಬಿ. ಮತ್ತಿತರರು ಉಪಸ್ಥಿತರಿದ್ದರು.

ತ್ಯಾಜ್ಯ ವಿಲೇವಾರಿ ಘಟಕ ಕೈಬಿಡಿ

ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿನ ಗಾಯರಾಣ ಜಾಗದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನಿರ್ಮಿಸುತ್ತಿರುವ ತ್ಯಾಜ್ಯ ವಿಲೇವಾರಿ ಘಟಕ ಕಾಮಗಾರಿ ಕೈಬಿಡುವಂತೆ ಒತ್ತಾಯಿಸಿ ಗ್ರಾಮಸ್ಥರು ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಸಾಂಬ್ರಾ ಗ್ರಾಮದಲ್ಲಿ ಜಾನುವಾರುಗಳನ್ನು ಮೇಯಿಸಲು ಮೀಸಲಿಟ್ಟ ಐದು ಎಕರೆ ಗಾಯರಾಣ ಭೂಮಿಯಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲು ಗ್ರಾಮ ಪಂಚಾಯಿತಿಯಿಂದ ನಿರ್ಧಾರ ಕೈಗೊಳ್ಳಲಾಗಿದೆ. ಗ್ರಾಮಸ್ಥರಿಗೆ ಗೊತ್ತಿಲ್ಲದಂತೆ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಗ್ರಾಮ ಪಂಚಾಯಿತಿ ಜಮೀನು ನೀಡಿದೆ ಎಂದು ಗ್ರಾಮಸ್ಥರು ದೂರಿದರು. ಸ್ಥಳೀಯರಾದ ಎಸ್.ಆರ್.ದೇಸಾಯಿ, ಕೆ.ಎಸ್. ಚೌಗುಲೆ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net