ಕಲುಷಿತ ಆಹಾರ ಸೇವಿಸಿ ಮತ್ತೆ 30 ವಿದ್ಯಾರ್ಥಿಗಳು ಅಸ್ವಸ್ಥ

3BGV5_STUDENTS ASVASHTHA
Published on

ಚಿಕ್ಕೋಡಿ: ತಾಲೂಕಿನ ಹಿರೇಕೊಡಿಯ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಭಾನುವಾರ ಮತ್ತೆ ಕಲುಷಿತ ಆಹಾರ ಸೇವಿಸಿ 30ಕ್ಕೂ ಅಧಿಕ ಮಕ್ಕಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ಕೆಲ ದಿನಗಳ ಹಿಂದೆ ಇದೇ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ 140ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು.

30ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಂತಿ, ಭೇದಿಯಿಂದ ಭಾನುವಾರ ತಡರಾತ್ರಿ ಬಳಲಿದ್ದಾರೆ. ಅವರ ಪೈಕಿ 15 ವಿದ್ಯಾರ್ಥಿಗಳು ಶಾಲೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಏಳು ವಿದ್ಯಾರ್ಥಿಗಳಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಹಿಂದಿನ ಘಟನೆ ಸಂಬಂಧ ಕೆಲ ದಿನಗಳ ಹಿಂದೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಸಂದೀಪ ಪಾಟೀಲ, ಚಿಕ್ಕೋಡಿ ಹಿರಿಯ ಸಿವಿಲ್ ನ್ಯಾಯಾಧೀಶ ಹರೀಶ ಪಾಟೀಲ ತಂಡ ಭೇಟಿ ನೀಡಿ ಪರಿಶೀಲಿಸಿತ್ತು. ಅಡುಗೆ ಕೋಣೆಯಲ್ಲಿ ಕೊಳೆತ ಬಾಳೆಹಣ್ಣು, ಹಾಳಾದ ತರಕಾರಿ ಕಂಡು ಸಿಬ್ಬಂದಿ ಹಾಗೂ ಮೇಲಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿತ್ತು.

ಷಡ್ಯಂತ್ರ ಶಂಕೆ: ಘಟನೆಗೆ ಸಂಬಂಧಿಸಿ ದುಷ್ಕರ್ಮಿಗಳು ಷಡ್ಯಂತ್ರ ರೂಪಿಸಿರುವ ಸಾಧ್ಯತೆ ಇದ್ದು, ಈ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net