371 (ಜೆ) ವಿಚಾರ ಸಂಕಿರಣ 3ಕ್ಕೆ

DSC_9926
Published on

ಬೀದರ್: ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗಾಗಿ ಜಾರಿಗೆ ತಂದಿರುವ 371 (ಜೆ) ಸಾಧಕ ಬಾಧಕ ಕುರಿತು ಚರ್ಚಿಸಲು ಜ.3ರಂದು ನಗರದಲ್ಲಿ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ವಿಭಾಗೀಯ ಪ್ರಧಾನ ಕಾರ್ಯದರ್ಶಿ ಅನೀಲಕುಮಾರ ಬೆಲ್ದಾರ್ ಹೇಳಿದರು.

ಬೆಳಗ್ಗೆ 11ಕ್ಕೆ ನಗರದ ಅಂಬೇಡ್ಕರ್ ವೃತ್ತದ ಹತ್ತಿರದ ಕನ್ನಡ ಸಾಹಿತ್ಯ ಸಂಘದ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ವಿಭಾಗದ ಎಲ್ಲ ಪದಾಧಿಕಾರಿಗಳು, ಹಿರಿಯ ಮುಖಂಡರು, ಹೋರಾಟಗಾರರು ಭಾಗವಹಿಸುವರು. ಜಿಲ್ಲೆಯ ಎಲ್ಲ ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರು, ಸಂಘ ಸಂಸ್ಥೆಗಳ ಪ್ರಮುಖರು, ಪ್ರಗತಿಪರ ಚಿಂತಕರು, ಹೋರಾಟಗಾರರು ಪಾಲ್ಗೊಳ್ಳಲಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

371 (ಜೆ) ಅನುಷ್ಠಾನಕ್ಕಾಗಿ ರಚಿಸಲಾದ ಸಚಿವ ಸಂಪುಟ ಉಪಸಮಿತಿ ಅಧ್ಯಕ್ಷರನ್ನು ಬದಲಾವಣೆ ಮಾಡಿ ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಸಚಿವರನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕು. ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳು ತಮ್ಮ ವ್ಯಾಪ್ತಿಯಲ್ಲಿ ಪಿಎಚ್ ಡಿ ಸಂಶೋಧನಾ ಪ್ರವೇಶ ಪ್ರಕ್ರಿಯೆಯಲ್ಲಿ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು.

ಕಲ್ಯಾಣ ಕರ್ನಾಟಕಕ್ಕೆ 371(ಜೆ) ಕಲಂ ಸಮಗ್ರ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಿ, ಅಪರ ಮುಖ್ಯ ಕಾರ್ಯದರ್ಶಿ ಸ್ಥಾನದ ಅಧಿಕಾರಿಯನ್ನು ಮುಖ್ಯಸ್ಥರನ್ನಾಗಿ ಮಾಡಬೇಕು. ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಎಚ್.ಕೆ.ಪಾಟೀಲ್ ನೇತೃತ್ವದ ಸಚಿವ ಸಂಪುಟ ಉಪಸಮಿತಿ ಮಾಡಿದ 25 ಶಿಫಾರಸ್ಸುಗಳಲ್ಲಿ ಯಾವುದೇ ಅನುಷ್ಠಾನಗೊಂಡಿಲ್ಲ. ಎಲ್ಲ ಶಿಫಾರಸ್ಸು ಅನುಷ್ಠಾನಕ್ಕೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

371(ಜೆ) ಕಲಂ ಸಮಗ್ರ ಅನುಷ್ಠಾನಗೊಳಿಸಲು ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಹಾಗೂ ಕಾನೂನು ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಆರು ಜಿಲ್ಲೆಗಳ ಒಬ್ಬ ಹೋರಾಟಗಾರರ ಸಮ್ಮುಖದಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಪರಿಶೀಲನೆ ನಡೆಸಬೇಕು ಎಂದರು.

ಪ್ರಮುಖರಾದ ಪಂಡಿತರಾವ್ ಚಿದ್ರಿ, ಪ್ರೊ.ದೇವೇಂದ್ರ ಕಮಲ, ಶಂಕ್ರೆಪ್ಪ ಹೊನ್ನಾ ಇದ್ದರು.

ಹಲವು ವರ್ಷಗಳ ಹೋರಾಟದ ಫಲವಾಗಿ ಹಿಂದುಳಿದ ಕಲ್ಯಾಣ ಕರ್ನಾಟಕ ಸರ್ವಾಗೀಣ ಅಭಿವೃದ್ಧಿಗಾಗಿ 371 (ಜೆ) ಜಾರಿಗೆ ತಂದರು ನಿರೀಕ್ಷಿತ ಪ್ರಗತಿ ಹೊಂದುತ್ತಿಲ್ಲ. 371 (ಜೆ) ಸಮರ್ಪಕ ಅನುಷ್ಠಾನಕ್ಕೆ ಸರ್ಕಾರ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು.| ಅನೀಲಕುಮಾರ ಬೆಲ್ದಾರ್ಹೈಕ ಸಮಿತಿ ವಿಭಾಗೀಯ ಪ್ರಧಾನ ಕಾರ್ಯದರ್ಶಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net