

ಹಾವೇರಿ: ಎಸ್ಇಪಿ, ಟಿಎಸ್ಪಿ ಯೋಜನೆಗಳಿಗೆ ಮಂಜೂರಾದ ಅನುದಾನ ಲ್ಯಾಪ್ಸ್ ಆದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಲಾಗುವುದು. ಲಭ್ಯವಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು 4 ತಿಂಗಳೊಳಗೆ ನಿಗದಿತ ಗುರಿ ಸಾಧಿಸ ಬೇಕು ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ ಸೂಚಿಸಿದರು.
ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಗಳ ಅಡಿ ರಾಜ್ಯವಲಯ, ಜಿಪಂ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯೋಜನೆಗಳ ಅನುಷ್ಠಾನಕ್ಕೆ ಮಾರ್ಚ್ವರೆಗೆ ಕಾಯದೇ ಫಲಾನುಭವಿಗಳಿಗೆ ತಲುಪಿಸುವ ಕೆಲಸವಾಗಬೇಕು. ಸರ್ಕಾರದ ಎಸ್ಇಪಿ, ಟಿಎಸ್ಪಿ ಯೋಜನೆಯ ಅನುದಾನದ ಜತೆಗೆ ನಗರ ಸ್ಥಳೀಯ ಸಂಸ್ಥೆಗಳ ಆದಾಯದಲ್ಲಿ ಶೇ. 29ರಷ್ಟು ಎಸ್ಸಿ, ಎಸ್ಟಿ ಯೋಜನೆಗಳಿಗೆ ಖರ್ಚು ಮಾಡಬೇಕು ಎಂದರು.
ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಎಸ್ಸಿ, ಎಸ್ಟಿ ಬೀದಿ ವ್ಯಾಪಾರಿಗಳನ್ನು ಗುರುತಿಸಿ ಸಾಲ ವಿತರಿಸಬೇಕು. ಕೃಷಿ ಇಲಾಖೆಯಿಂದ ವಿವಿಧ ಯೋಜನೆಗಳಡಿ ಎಸ್ಸಿ, ಎಸ್ಟಿ ರೈತರಿಗೆ ಕೃಷಿ ಪರಿಕರ ಇತರ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸೂಚಿಸಿದರು. ಜಿಪಂ ಸಿಇಒ ರಮೇಶ ದೇಸಾಯಿ ಮಾತನಾಡಿ, ಜಿಲ್ಲೆಯ ವಿವಿಧ ತಾಲೂಕಿನ ಜಾನುವಾರುಗಳಲ್ಲಿ ಲಂಪಿಸ್ಕಿನ್ ರೋಗ ಕಾಣಿಸಿಕೊಂಡಿದ್ದು, ನಿಯಂತ್ರಣಕ್ಕೆ ಜಾನುವಾರು ಚಿಕಿತ್ಸಾ ಶಿಬಿರ ಆಯೋಜಿಸಬೇಕು ಎಂದು ಪಶು ಸಂಗೋಪನೆ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.
ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕಿ ಬಿ.ವಿ. ಚೈತ್ರಾ ಮಾತನಾಡಿ, ಕೆಲ ಇಲಾಖೆಗಳು ವೆಬ್ಸೈಟ್ನಲ್ಲಿ ಆಯಾ ಇಲಾಖೆಗಳ ಎಸ್ಇಪಿ, ಟಿಎಸ್ಪಿ ಯೋಜನೆ, ಅನುದಾನ ಹಾಗೂ ಫಲಾನುಭವಿಗಳ ಮಾಹಿತಿಯನ್ನು ಅಪ್ಲೋಡ್ ಮಾಡಿಲ್ಲ ಎಂದು ಜಿಲ್ಲಾಧಿಕಾರಿ ಗಮನಕ್ಕೆ ತಂದರು. ಕೂಡಲೇ ಅಪ್ಲೋಡ್ ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹೇಳಿದರು. ಸಭೆಯಲ್ಲಿ ಶಾಸಕ ನೆಹರು ಓಲೇಕಾರ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಎಲ್. ಪ್ರದೀಪ, ಡಿಡಿಪಿಐ ಅಂದಾನೆಪ್ಪ ವಡಿಗೇರಿ, ಪಶು ಸಂಗೋಪನೆ ಇಲಾಖೆ ಉಪನಿರ್ದೇಶಕ ರಾಜು ಕೂಲೇರ, ಪೌರಾಯುಕ್ತ ಬಸವರಾಜ ಜಿದ್ದಿ ಇತರರಿದ್ದರು.