ಕರಾವಳಿಯಲ್ಲಿ ಮಾತ್ರ 5 ದಿನ ಮಳೆ:ಉಳಿದ ಭಾಗಗಳಲ್ಲಿ ಕ್ಷೀಣ

Rain
Published on

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಬಹುತೇಕ ಭಾಗಗಳಲ್ಲಿ ಮಳೆ ಕೊರತೆ ಮುಂದುವರಿದಿದೆ.

ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ಮೋಡ ಕವಿದ ವಾತಾವರಣ ಇದ್ದರೂ ಮಳೆ ಬೀಳುತ್ತಿಲ್ಲ. ಇದರಿಂದ ಜುಲೈ ಮೊದಲ ವಾರದಲ್ಲೂ 17-18 ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇ.70 ಕಡಿಮೆ ಮಳೆಯಾಗಿದೆ. ಜೂನ್‌ನಲ್ಲಿಯೂ ಆ ಜಿಲ್ಲೆಗಳಲ್ಲಿ ಮಳೆ ಇಳಿಮುಖವಾಗಿತ್ತು.

ಮಲೆನಾಡು, ಕರಾವಳಿ ಹೊರತುಪಡಿಸಿ ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಭಾಗದ ಎಲ್ಲ ಜಿಲ್ಲೆಗಳಲ್ಲಿ ಮುಂದಿನ 2 ವಾರ ಇನ್ನಷ್ಟು ಮಳೆ ಕೊರತೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜು.10ರಿಂದ ಜು.16ರವರೆಗೆ ಭಾರಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ. ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬೆಳಗಾವಿ, ಬೀದರ್, ಧಾರಾವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂದಿನ 5 ದಿನ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಲಿದೆ.ಈ ಅವಧಿಯಲ್ಲಿ ಅಧಿಕವಾಗಿ ಗಾಳಿ ಬೀಸಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net