

ಶಿಗ್ಗಾಂವಿ: ಎರಡು ವಾರದಿಂದ ಸುರಿಯುತ್ತಿರುವ ಮಳೆಗೆ ತಾಲೂಕಿನಲ್ಲಿ 150ಕ್ಕೂ ಹೆಚ್ಚು ಮನೆಗಳು ನೆಲಸಮಗೊಂಡಿವೆ. ಮನೆ ಕಳೆದುಕೊಂಡಿರುವ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಬಿಜೆಪಿ ಮುಖಂಡ, ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ತಾಲೂಕಿನ ಚಿಕ್ಕಮಲ್ಲೂರ ಗ್ರಾಮದಲ್ಲಿ ಬಿದ್ದ ಮನೆಗಳಿಗೆ ಗುರುವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಮಾಧ್ಯಮದವರೊಂದಿಗೆ ಮಾತನಾಡಿದರು. ಈ ಹಿಂದೆ ಆಡಳಿತದಲ್ಲಿದ್ದ ಬಿಜೆಪಿ ಸರ್ಕಾರ, ನೆರೆಗೆ ನೆಲೆ ಕಳೆದುಕೊಂಡ ಕುಟುಂಬವೊಂದಕ್ಕೆ 5 ಲಕ್ಷ ರೂ. ಪರಿಹಾರ ನೀಡಿತ್ತು. ಆದರೆ, ಈಗಿನ ಕಾಂಗ್ರೆಸ್ ಸರ್ಕಾರ ಸಂಕಷ್ಟದಲ್ಲಿದ್ದವರನ್ನು ಸೌಜನ್ಯಕ್ಕೂ ಭೇಟಿ ಮಾಡಿ ಸಾಂತ್ವನ ಹೇಳುತ್ತಿಲ್ಲ. ಅಗತ್ಯ ಪರಿಹಾರವನ್ನೂ ವಿತರಿಸುತ್ತಿಲ್ಲ ಎಂದು ಅಕ್ರೋಶ ವ್ಯಕ್ತಪಡಿಸಿದರು.
ಅತಿಯಾದ ಮಳೆಯಿಂದಾಗಿ ಸಂಪೂರ್ಣ ಮನೆ ಕಳೆದುಕೊಂಡ ಕುಟುಂಬಕ್ಕೆ ರಾಜ್ಯ ಸರ್ಕಾರ 1.20 ಲಕ್ಷ ರೂ. ಪರಿಹಾರ ನೀಡಿ ಕೈತೊಳೆದುಕೊಳ್ಳುತ್ತಿದೆ. ಇದು ನೆರೆ ಸಂತಸ್ತರಿಗೆ ಆಟಕ್ಕುಂಟು, ಲೆಕ್ಕಕ್ಕಿಲ್ಲವೆಂಬಂತಾಗಿದೆ. ಇಂದಿನ ದುಬಾರಿ ಕಾಲದಲ್ಲಿ ಈ ಹಣ ಯಾವುದಕ್ಕೂ ಸಾಲದಂತಾಗಿದೆ ಎಂದು ದೂರಿದರು.
ಸರ್ಕಾರ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡಬೇಕು. ಸಾವಿರಾರು ಎಕರೆ ಜಮೀನಿನಲ್ಲಿ ಬೆಳೆದ ಬೆಳೆಗೆ ಮಳೆ ನೀರು ನುಗ್ಗಿ ಹಾನಿಯಾಗಿದೆ. ತಕ್ಷಣ ಪರಿಶೀಲಿಸಿ ಪರಿಹಾರ ಕಾರ್ಯಾಚರಣೆ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮುಖಂಡರಾದ ಎಂ.ಎನ್. ವೆಂಕೋಜಿ, ವೀರನಗೌಡ್ರ ಗೋಣಿಗೌಡ್ರ, ಗೋವಿಂದಪ್ಪ ವಾಲ್ಮೀಕಿ, ವೀರಭದ್ರಪ್ಪ ಕಬ್ಬೂರ, ಮಹಾದೇವಪ್ಪ ಗಂಜಿಗಟ್ಟಿ, ಶಿವಾನಂದ ಗಂಜಿಗಟ್ಟಿ, ಮಂಜು ಏಗನಗೌಡ್ರ, ಮುತ್ತು ಹಿರೇಮಠ ಸೇರಿದಂತೆ ಇತರರಿದ್ದರು.