

ಹುಬ್ಬಳ್ಳಿ : ಸ್ಮಾರ್ಟ್ಸಿಟಿ ಯೋಜನೆಯಡಿ ಲೋಹಿಯಾನಗರದಲ್ಲಿ 180 ಕೋಟಿ ರೂ. ವೆಚ್ಚದಲ್ಲಿ ನಿರ್ವಿುಸುತ್ತಿರುವ ಅಂತಾರಾಷ್ಟ್ರೀಯ ದರ್ಜೆಯ ಕ್ರೀಡಾ ಸಂಕೀರ್ಣದ ಕಾಮಗಾರಿಯನ್ನು ಐದು ತಿಂಗಳಲ್ಲಿ ಪೂರ್ಣಗೊಳಿಸಲು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ಅವರೊಂದಿಗೆ ಕ್ರೀಡಾ ಸಂಕೀರ್ಣದ ಕಾಮಗಾರಿ ಪರಿಶೀಲಿಸಿದ ಅವರು, ಸ್ಮಾರ್ಟ್ಸಿಟಿ ಅಧಿಕಾರಿಗಳು ಇನ್ನೆರೆಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವುದಾಗಿ ಹೇಳಿದ್ದರು. ಆದರೆ, ಐದು ತಿಂಗಳ ಗಡುವು ನೀಡಲಾಗಿದೆ. ಈ ಕ್ರೀಡಾ ಸಂಕೀರ್ಣದ ನಿರ್ವಹಣೆ ದೊಡ್ಡ ಸವಾಲಾಗಿದೆ. ಈಗಾಗಲೇ ಅರವಿಂದ ಬೆಲ್ಲದ ಅವರೊಂದಿಗೆ ಸೇರಿಕೊಂಡು ಹಲವಾರು ಕಂಪನಿಗಳೊಂದಿಗೆ ನಿರ್ವಹಣೆಯ ಜವಾಬ್ದಾರಿ ಬಗ್ಗೆ ರ್ಚಚಿಸಲಾಗಿದೆ ಎಂದು ತಿಳಿಸಿದರು.
ಕ್ರೀಡಾ ಸಂಕೀರ್ಣಕ್ಕೆ ಹಾಸ್ಟೆಲ್, ತರಬೇತುದಾರರ ನೇಮಕ ಹಾಗೂ ಇತರ ಕಾರ್ಯಗಳಿಗೆ ಇನ್ನೂ 60 ಕೋಟಿ ರೂ.ಗಳ ಅಗತ್ಯ ಇದೆ. ಹಣಕಾಸಿನ ನೆರವಿಗಾಗಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.
900 ಕೋಟಿ ರೂ.ಗೂ ಅಧಿಕ ವೆಚ್ಚದ ಸ್ಮಾರ್ಟ್ಸಿಟಿ ಯೋಜನೆಯ ಕಾಮಗಾರಿಗಳ ಬಗ್ಗೆ ನಿರಾಶೆ ಇದೆ. ಶೀಘ್ರದಲ್ಲಿ ಪರಿಶೀಲನಾ ಸಭೆ ನಡೆಸಲಾಗುವುದು. ಯೋಜನೆ ಅನುಷ್ಠಾನಗೊಳಿಸುವ ರಾಜ್ಯ ಸರ್ಕಾರದ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಇಂತಹ ದುಃಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮೇಯರ್ ರಾಮಪ್ಪ ಬಡಿಗೇರ, ಉಪ ಮೇಯರ್ ದುರ್ಗಮ್ಮ ಬಿಜವಾಡ, ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ರೂಪಾ ಶೆಟ್ಟಿ, ಸತೀಶ ಹಾನಗಲ್, ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ಇತರರು ಇದ್ದರು.