

ಮೈಸೂರು: ಬಿಜೆಪಿ ಸರ್ಕಾರ ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಿಸುವ ಮೂಲಕ ನುಡಿದಂತೆ ನಡೆದುಕೊಂಡಿದೆ. ಈ ಸಂಬಂಧ ನ.20 ರಂದು ಬಳ್ಳಾರಿ ಜಿಲ್ಲೆಯಲ್ಲಿ ಆಯೋಜಿಸಿರುವ ಪರಿಶಿಷ್ಟ ಪಂಗಡದ ಸಮಾವೇಶದಲ್ಲಿ ಮೈಸೂರು ನಗರ ಮತ್ತು ಗ್ರಾಮಾಂತರ ಸೇರಿ ಜಿಲ್ಲೆಯಿಂದ ಐದು ಸಾವಿರ ಜನ ಭಾಗಿಯಾಗಲಿದ್ದಾರೆ ಎಂದು ಬಿಜೆಪಿ ಎಸ್‌ಟಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಎಸ್. ಅಣ್ಣಯ್ಯ ನಾಯಕ ಹೇಳಿದರು.
ಅಂದು ನಗರದಿಂದ 20ರಿಂದ 30 ಬಸ್‌ಗಳು, ಗ್ರಾಮಾಂತರದಿಂದ 30ರಿಂದ 40 ಬಸ್‌ಗಳಲ್ಲಿ ಬಳ್ಳಾರಿಗೆ ತೆರಳಲಿದ್ದಾರೆ. ಈ ಸಮಾವೇಶದಲ್ಲಿ ರಾಜ್ಯದ ಎಲ್ಲ ಭಾಗಗಳಿಂದ ಹತ್ತು ಲಕ್ಷಕ್ಕೂ ಹೆಚ್ಚಿನ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಮ್ಮ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸುವ ವಿಚಾರದಲ್ಲಿ ಎಲ್ಲ ಪಕ್ಷಗಳು ಮೋಸ ಮಾಡಿದವು. ಆದರೆ ಬಿಜೆಪಿ ನ್ಯಾಯ ನೀಡಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲ ಅನುಕೂಲ ಮಾಡಿಕೊಟ್ಟಿದೆ. ತಳವಾರ ಮತ್ತು ಪರಿವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಯಿತು. ಸಮಾಜ ಕಲ್ಯಾಣ ಇಲಾಖೆಯಲ್ಲಿ ಇದ್ದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯನ್ನು ಬೇರ್ಪಡಿಸಿ ಪ್ರತ್ಯೇಕ ಸಚಿವಾಲಯ ಮಾಡಲಾಯಿತು ಎಂದರು.
ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ.3ರಿಂದ 7ಕ್ಕೆ ಹೆಚ್ಚಿಸಿ ಐತಿಹಾಸಿಕ ನಿರ್ಣಯ ಕೈಗೊಂಡಿರುವುದರಿಂದ 70 ಲಕ್ಷಕ್ಕೂ ಹೆಚ್ಚಿರುವ ನಾಯಕ ಸಮಾಜದ ಅಭಿವೃದ್ಧಿಗೆ ದಾರಿಯಾಗಲಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವಾಲಯ ಮತ್ತು ನಿರ್ದೇಶನಾಲಯವನ್ನು ಪ್ರತ್ಯೇಕವಾಗಿ ರಚಿಸಿರುವುದರಿಂದ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಖರ್ಚು ಮಾಡಲು ನೆರವಾಗಲಿದೆ ಎಂದರು.
ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಿಸುತ್ತಿರುವ ರಾಮಮಂದಿರದ ಸಮೀಪ ಮಹರ್ಷಿ ವಾಲ್ಮೀಕಿ ಮಂದಿರವನ್ನು ನಿರ್ಮಾಣ ಮಾಡಬೇಕು. ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣದ ಮೂಲಕವೇ ರಾಮ ಜಗತ್ತಿಗೆ ಆದರ್ಶ ಪುರುಷ ಎನ್ನುವುದು ಮನೆ ಮಾತಾಗಿದೆ. ಹಾಗಾಗಿ ವಾಲ್ಮೀಕಿ ಮಂದಿರ ನಿರ್ಮಾಣ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.
ಜಿಲ್ಲಾ ಸಹ ವಕ್ತಾರ ಡಾ.ವಸಂತಕುಮಾರ್ ಮಾತನಾಡಿ, ಬಳ್ಳಾರಿ ಸಮಾವೇಶಕ್ಕೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವ ಬಿ.ಶ್ರೀರಾಮುಲು, ರಾಜ್ಯಾಧ್ಯಕ್ಷ ಮೊದಲಾದ ನಾಯಕರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ರಾಜ್ಯ ಬಿಜೆಪಿ ಎಸ್‌ಟಿ ಮೋರ್ಚಾ ಕಾರ್ಯದರ್ಶಿ ಕೆ.ಆರ್. ಮಂಜುಳಾ ಮಾತನಾಡಿ, ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಮೀಸಲಾತಿ ಹೆಚ್ಚಿಸಿರುವ ಕಾರಣ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವಿನ ಉಡುಗೊರೆ ನೀಡಿ ಋಣ ತೀರಿಸುವ ಕೆಲಸ ಮಾಡಲು ಸಮಾವೇಶ ನಡೆಸಲಾಗುತ್ತಿದೆ ಎಂದರು.