

ಹನೂರು: ಕೊಳ್ಳೇಗಾಲದ ಸರ್ಕಾರಿ ಉಪ ವಿಭಾಗೀಯ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವುದು ಸೇರಿದಂತೆ ಹನೂರು ತಾಲೂಕಿನ 5 ಆಸ್ಪತ್ರೆಯನ್ನು ಮೇಲ್ದರ್ಜೇರಿಸಲು ಸರ್ಕಾರದಿಂದ ಅನುಮೋದನೆ ದೊರಕಿದೆ.
ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಏ.24 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೊಳ್ಳೇಗಾಲದ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯಾಗಿ ಮೇಲ್ದರ್ಜೇರಿಸಲಾಗುವುದು ಎಂದು ಘೋಷಣೆ ಮಾಡಲಾಗಿತ್ತು. ಇನ್ನು ತಾಲೂಕಿನ ಕೆಲವು ಆಸ್ಪತ್ರೆಗಳಲ್ಲಿ ಅಗತ್ಯ ವೈದ್ಯ, ಸಿಬ್ಬಂದಿ ಹಾಗೂ ಮೂಲ ಸೌಕರ್ಯ ಕೊರತೆ ಹಿನ್ನೆಲೆ ಸಾರ್ವಜನಿಕರು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವಂತೆ ಒತ್ತಾಯ ಕೇಳಿ ಬಂದಿತ್ತು. ಹಾಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ ವಿ.ಪದ್ಮಾ ಅವರು ಅನುಮೋದನೆ ನೀಡಿ ಆದೇಶ ಹೊರಡಿಸಿದ್ದಾರೆ.
ಕೊಳ್ಳೇಗಾಲದ ಆಸ್ಪತ್ರೆಯು 150 ಹಾಸಿಗೆಯುಳ್ಳ ಆಸ್ಪತ್ರೆಯಾಗಿದ್ದು, ಇದೀಗ 250 ಹಾಸಿಗೆಯುಳ್ಳ ಜಿಲ್ಲಾಸ್ಪತ್ರೆಯಾಗಿ ಅನುಮೋದನೆ ದೊರಕಿದ್ದು, 6 ಕೋಟಿ 29 ಲಕ್ಷ ರೂ. ವೆಚ್ಚದಲ್ಲಿ 98 ಹುದ್ದೆ ಭರ್ತಿಯಾಗಲಿದೆ. ಹಾಗೆಯೇ 2 ಕೋಟಿ 49 ಲಕ್ಷ ರೂ. ವೆಚ್ಚದಲ್ಲಿ 25 ಹುದ್ದೆ ಒಳಗೊಂಡಂತೆ ಹನೂರು ತಾಲೂಕಿನ ಪಿ.ಜಿ ಪಾಳ್ಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ, 74 ಲಕ್ಷ ರೂ. ವೆಚ್ಚದಲ್ಲಿ 8 ಹುದ್ದೆ ಒಳಗೊಂಡಂತೆ ಗೋಪಿನಾಥಂ ಸರ್ಕಾರಿ ಪ್ರಾಥಮಿಕ ಆರೋಗ್ಯ ಉಪ ಕೇಂದ್ರ, 35 ಲಕ್ಷ ರೂ. ವೆಚ್ಚದಲ್ಲಿ 4 ಹುದ್ದೆ ಒಳಗೊಂಡಂತೆ ಒಡೆಯರಪಾಳ್ಯ ಸಂಚಾರಿ ಗಿರಿಜನ ಆರೋಗ್ಯ ಘಟಕ ಹಾಗೂ 3.80 ಕೋಟಿ ರೂ. ವೆಚ್ಚದಲ್ಲಿ 39 ಹುದ್ದೆ ಒಳಗೊಂಡಂತೆ ಹನೂರಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 50 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಅನುಮೋದನೆ ದೊರಕಿದೆ. ಇದರ ಆದೇಶದ ಪ್ರತಿಯು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಜನರಲ್ಲಿ ಸಂತಸ ಮನೆ ಮಾಡಿದೆ.