

ನುಗ್ಗೇಹಳ್ಳಿ: ತಾಲೂಕಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಸಲುವಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗಳಲ್ಲಿ 50 ಸ್ಮಾರ್ಟ್ ಕ್ಲಾಸ್ ಪ್ರಾರಂಭಿಸಲಾಗಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು.
ಹೋಬಳಿಯ ಹೆಬ್ಬಾಳಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ವತಿಯಿಂದ ನಿರ್ಮಾಣ ಮಾಡಲಾಗಿದ್ದ ನೂತನ ಅಡುಗೆ ಕೋಣೆ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಮಾತನಾಡಿದರು.
ಸುಮಾರು 5.29 ಲಕ್ಷ ರೂ. ವೆಚ್ಚದಲ್ಲಿ ನೂತನ ಅಡುಗೆ ಕೋಣೆಯನ್ನು ನಿರ್ಮಿಸಲಾಗಿದ್ದು, ಇದರೊಂದಿಗೆ 3 ಕೊಠಡಿಗಳ ನವೀಕರಣಕ್ಕೆ ಅನುದಾನ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ನವೀಕರಣಗೊಂಡಿರುವ ಕೊಠಡಿಗಳ ಪಕ್ಕದಲ್ಲಿ ಜಗುಲಿ ನಿರ್ಮಾಣಕ್ಕೆ ಅನುದಾನ ನೀಡಲಾಗುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷಗಳಾದರೂ ತಾಲೂಕಿನಲ್ಲಿ ಸರ್ಕಾರಿ ಶಾಲೆಗಳ ಹೊಸ ಕಟ್ಟಡ ಹಾಗೂ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ನೀಡಿಲ್ಲ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಲಾಗಿದೆ ಎಂದರು.
ಅಕ್ಷರ ದಾಸೋಹ ಕಾರ್ಯಕ್ರಮಕ್ಕೆ 1ರಿಂದ 8ನೇ ತರಗತಿವರೆಗೆ ಕೇಂದ್ರ ಸರ್ಕಾರ ಅನುದಾನ ನೀಡುತ್ತಿದೆ. 9 ರಿಂದ 10ನೇ ತರಗತಿವರೆಗೆ ರಾಜ್ಯ ಸರ್ಕಾರ ಅನುದಾನ ನೀಡುತ್ತಿದ್ದು, ವಾರದ 4 ದಿನ ಮಕ್ಕಳಿಗೆ ಮೊಟ್ಟೆ ನೀಡಲು ಉದ್ಯಮಿ ಅಜೀಮ್ ಪ್ರೇಮ್ ಜಿ ಹಣ ನೀಡಿದ್ದಾರೆ. ಉಳಿದ ಎರಡು ದಿನ ರಾಜ್ಯ ಸರ್ಕಾರ ನೀಡುತ್ತಿದೆ. ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಕಾರ್ಯಕ್ರಮಗಳನ್ನು ಅಂಗನವಾಡಿ ಮಟ್ಟದಲ್ಲೇ ಜಾರಿಗೆ ತಂದಿವೆ. ರಾಜ್ಯದಲ್ಲಿ ಸಮರ್ಪಕ ಅನುಷ್ಠಾನದಿಂದ ಮಕ್ಕಳಲ್ಲಿ ಅಪೌಷ್ಟಿಕತೆ ಕಂಡು ಬರುತ್ತಿಲ್ಲ. ದೇಶದ ಉತ್ತರ ಪ್ರದೇಶ ಹಾಗೂ ಬಿಹಾರ ರಾಜ್ಯ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಾಗಿದೆ. ಆದರೆ ರಾಜ್ಯದ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿದೆ. ಈ ಬಗ್ಗೆ ಎಲ್ಲರೂ ಎಚ್ಚರ ವಹಿಸುವುದು ಸೂಕ್ತವಾಗಿದೆ ಎಂದರು.ಹೆಬ್ಬಳಲು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ತಾಲೂಕಿಗೆ ಮಾದರಿಯಾಗಿದ್ದು, ಶಾಲೆ ಆವರಣದಲ್ಲಿ
ಹಸಿರು ವನ ಸೇರಿದಂತೆ ಸ್ವಚ್ಛತೆ ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಜತೆಗೆ ಇಲ್ಲಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಕಳೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100ಕ್ಕೆ 100 ಫಲಿತಾಂಶ ಬಂದಿದೆ. ಪಾಲಕರು ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಬೇಕು ಎಂದು ಮನವಿ ಮಾಡಿದರು.
ಕ್ಷೇತ್ರ ಸಮನ್ವಯ ಅಧಿಕಾರಿ ಅನಿಲ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿ ಉಚಿತ ಶಿಕ್ಷಣಕ್ಕೆ ಹೆಚ್ಚಿನ ಅನುದಾನ ನೀಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಉಚಿತ ಪಠ್ಯ, ಸಮವಸ್ತ್ರ ಶೂ, ಬಿಸಿಯೂಟ, ವಿದ್ಯಾರ್ಥಿ ವೇತನ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸಿದೆ. ಕ್ಷೇತ್ರದ ಶಾಸಕ ಸಿ.ಎನ್. ಬಾಲಕೃಷ್ಣ ಅವರು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ಮಕ್ಕಳಿಗೆ ತೊಂದರೆ ಆಗಬಾರದೆಂದು ಸುಮಾರು 20ಕ್ಕೂ ಹೆಚ್ಚು ಅತಿಥಿ ಶಿಕ್ಷಕರಿಗೆ ವೈಯಕ್ತಿಕವಾಗಿ ಸಂಬಳ ನೀಡಿ ಸರ್ಕಾರಿ ಶಾಲೆಗಳ ಉಳಿವಿಗೆ ಹೆಚ್ಚಿನ ಸಹಕಾರ ನೀಡುತ್ತಾ ಬಂದಿದ್ದಾರೆ. ತಾಲೂಕಿನಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಣ ಇಲಾಖೆ ವತಿಯಿಂದ ಸ್ಮಾರ್ಟ್ ಕ್ಲಾಸ್ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸರ್ಕಾರಿ ಶಾಲೆಗಳ ಉಳಿವಿಗೆ ಪ್ರತಿಯೊಬ್ಬರೂ ಕೈ ಜೋಡಿಸುವುದರಿಂದ ಶಿಕ್ಷಣ ವ್ಯಾಪಾರೀಕರಣ ತಡೆಯಬಹುದಾಗಿದೆ ಎಂದರು.
ಶಾಲೆ ಮುಖ್ಯಶಿಕ್ಷಕ ಸಿದ್ದರಾಜು ಮಾತನಾಡಿ, ಶಾಲೆಯ ಅಭಿವೃದ್ಧಿ ಕೆಲಸಗಳಿಗೆ ಶಾಸಕರು ಹೆಚ್ಚಿನ ಸಹಕಾರ ನೀಡುತ್ತಾ ಬಂದಿದ್ದಾರೆ. ಬಾಕಿ ಉಳಿದಿರುವ ಕೊಠಡಿಗಳ ನವೀಕರಣಕ್ಕೆ ತುರ್ತಾಗಿ 10 ಲಕ್ಷ ರೂ. ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಅಕ್ಕನಹಳ್ಳಿ ಕೂಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎನ್. ರವಿಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ದೊರೆಸ್ವಾಮಿ, ನಾಗರಕ ವೇದಿಕೆ ಅಧ್ಯಕ್ಷ ತೋಟಿ ನಾಗರಾಜ್, ಅಕ್ಕನಹಳ್ಳಿ ಹಾಗೂ ನುಗ್ಗೇಹಳ್ಳಿ ಕೃಷಿ ಪತ್ತಿನ ಅಧ್ಯಕ್ಷರಾದ ವಿಕ್ಟರ್, ಸೋಸಲಗೆರೆ ಮಧು, ಎಸ್‌ಡಿಎಂಸಿ ಅಧ್ಯಕ್ಷ ಗೋಪಾಲ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಉಮಾ ಶಂಕರ್, ಹೋಬಳಿ ಶಿಕ್ಷಣ ಸಂಯೋಜಕ ಕರಿಯಪ್ಪಗೌಡ, ಬಿಆರ್‌ಪಿ ಶ್ರೀಕಾಂತ್, ತಾಲೂಕು ಸಿಆರ್‌ಪಿ ಸಂಘದ ಅಧ್ಯಕ್ಷ ಎಚ್.ಟಿ.ಮಂಜೇಗೌಡ, ಅಕ್ಕನಹಳ್ಳಿ ಕ್ಲಸ್ಟರ್ ಸಿಆರ್‌ಪಿ ಅಶೋಕ್ ಸುಧನ್, ಹೆಬ್ಬಾಳಲು ಪ್ರೌಢಶಾಲೆ ಮುಖ್ಯಶಿಕ್ಷಕಿ ಲೀಲಾ, ಗುತ್ತಿಗೆದಾರರಾದ ವೆಂಕಟೇಶ್, ಗ್ರಾಪಂ ಸದಸ್ಯ ಹೊನ್ನೇಗೌಡ, ಮುಖಂಡರಾದ ಗೌಡಪ್ಪ, ಎಂ.ಎಸ್.ಸುರೇಶ್, ಪುಟ್ಟಸ್ವಾಮಿ, ಚಿನ್ನೇನಹಳ್ಳಿ ರಾಮು, ಡೇರಿ ವೇಣು, ಮುಳಕೆರೆ ಬಾಬು, ಚೇತನ್, ಶಿಕ್ಷಕರಾದ ರೋಜ್ ಮೇರಿ ಇತರರು ಇದ್ದರು.