

ಬೆಂಗಳೂರು ಗ್ರಾಮಾಂತರ: ಗ್ರಾಮಾಂತರ ಜಿಲ್ಲೆಯ 52 ಪರೀಕ್ಷಾ ಕೇಂದ್ರಗಳಲ್ಲಿ ಜೂ.25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಅರಂಭವಾಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ.ನಾಯಕ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಿದ್ಧತೆ ಕುರಿತ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯ 13,252 ವಿದ್ಯಾರ್ಥಿಗಳು ಮತ್ತು ಹೊರ ಜಿಲ್ಲೆಯ 65 ವಿದ್ಯಾರ್ಥಿಗಳು ಹಾಗೂ ಜಿಲ್ಲೆಯ 125 ವಿದ್ಯಾರ್ಥಿಗಳು ಬೇರೆ ಜಿಲ್ಲೆಗಳಲ್ಲಿ ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ನೀಡಿದರು.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಆರೋಗ್ಯದ ಸುರಕ್ಷತೆಯೊಂದಿಗೆ ಪರೀಕ್ಷೆ ನಡೆಯಲಿರುವ ಎಲ್ಲ ಪರೀಕ್ಷಾ ಕೊಠಡಿ ಹಾಗೂ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಆವರಣದಲ್ಲಿ ಸೋಂಕು ನಿವಾರಕ ಸಿಂಪಡಿಸುವಂತೆ ಸೂಚನೆ ನೀಡಿರುವುದಾಗಿ ತಿಳಿಸಿದರು.
ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಥರ್ಮಲ್ ಸ್ಕ್ರೀನಿಂಗ್ ನಡೆಸಲಾಗುವುದು. ಕೆಮ್ಮು, ನೆಗಡಿ ಹಾಗೂ ಜ್ವರ ಲಕ್ಷಣ ಹೊಂದಿರುವ ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆ ನೀಡುವ ಎನ್-95 ಮಾಸ್ಕ್ ಧರಿಸಿ ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕು ಎಂದರು.
ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಲು ಬಸ್ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸೌಲಭ್ಯ ಉತ್ತಮವಾಗಿರುವಂತೆ ಕ್ರಮ ವಹಿಸಬೇಕು. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ 144 ಸಿಆರ್‌ಪಿಸಿ ಕಲಂ ಜಾರಿಮಾಡಲಾಗುವುದು ಹಾಗೂ ಪರೀಕ್ಷಾ ಕೇಂದ್ರಗಳ ಸಮೀಪದ ಝೆರಾಕ್ಸ್ ಅಂಗಡಿ ಮುಚ್ಚಲು ಆದೇಶಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಂಜುಳಾದೇವಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಂಗಾಮಾರೇಗೌಡ ಇದ್ದರು.