

ಮುಂಡರಗಿ: ಶಿವಾನುಭವ ಸೇವಾ ಸಮಿತಿ, ಶ್ರೀ ಜಗದ್ಗುರು ಅನ್ನದಾನೀಶ್ವರ ಸಂಸ್ಥಾನಮಠ ಹಾಗೂ ಅವ್ವ ಸೇವಾ ಟ್ರಸ್ಟ್ ಹುಬ್ಬಳ್ಳಿ ಸಹಯೋಗದಲ್ಲಿ ಏ. 23ರಂದು ಬೆಳಗ್ಗೆ 10:30 ಗಂಟೆಗೆ ಅಲ್ಲಮಪ್ರಭು ಹಾಗೂ ಅಕ್ಕಮಹಾದೇವಿ ಜಯಂತ್ಯುತ್ಸವ ಹಾಗೂ ಶ್ರೀ ಮಠದ 9ನೇ ಪೀಠಾಧಿಪತಿಗಳ 57ನೇ ಪುಣ್ಯ ಸ್ಮರಣೋತ್ಸವ ಮತ್ತು ಗುರವ್ವ ಶಿವಲಿಂಗಪ್ಪ ಹೊರಟ್ಟಿ ಸ್ಮರಣಾರ್ಥ ವಿಶೇಷ ಶಿವಾನುಭವ ಕಾರ್ಯಕ್ರಮ ಜರುಗಲಿದೆ ಎಂದು ನಾಡೋಜ ಡಾ. ಅನ್ನದಾನೀಶ್ವರ ಸ್ವಾಮೀಜಿ ಹೇಳಿದರು.
ಶ್ರೀಮಠದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಕಾರ್ಯಕ್ರಮದಲ್ಲಿ ನಾಡೋಜ ಡಾ. ಅನ್ನದಾನೀಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಉಪಸ್ಥಿತಿ ವಹಿಸಲಿದ್ದಾರೆ. ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ, ಶಶಿ ಸಾಲಿ, ಡಾ. ಬಸವರಾಜ ಧಾರವಾಡ, ಲಿಂಗನಾಯಕನಹಳ್ಳಿ ಡಾ. ನಿರಂಜನ ದೇವರು, ನಿವೃತ್ತ ಪ್ರಾಚಾರ್ಯ ಎಸ್.ಬಿ. ಕರಿಭರಮಗೌಡರ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಅವ್ವ ಸೇವಾ ಟ್ರಸ್ಟ್ನ ಸಂಚಾಲಕ ಡಾ. ಬಸವರಾಜ ಧಾರವಾಡ ಮಾತನಾಡಿ, ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ತಾಯಿ ಗುರವ್ವನವರ ಸ್ಮರಣಾರ್ಥ ಅನ್ನದಾನೀಶ್ವರ ಮಠದಲ್ಲಿ 1.25 ಲಕ್ಷ ರೂ. ಗಳ ದತ್ತಿ ನಿಧಿ ಸ್ಥಾಪಿಸಿದ್ದಾರೆ ಎಂದರು.
ಜಗದ್ಗುರು ಅನ್ನದಾನೀಶ್ವರ ವಿದ್ಯಾ ಸಮಿತಿ ಆಡಳಿತಾಧಿಕಾರಿ ಡಾ.ಬಿ.ಜಿ. ಜವಳಿ ಮಾತನಾಡಿ, ಗುರವ್ವ ಹೊರಟ್ಟಿ ಸಂಸ್ಮರಣ ದತ್ತಿನಿಧಿ ಶಿವಾನುಭವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಮಹಿಳೆಯರಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಎಸ್.ಎಸ್. ಗಡ್ಡದ, ಎಸ್.ಎಂ. ಅಗಡಿ, ಪೂಜಾರ ಇದ್ದರು.