

ಮಡಿಕೇರಿ: ೧೯೬೫ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ(ಮರಣೋತ್ತರ) ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯರವರ ೫೮ನೇ ಪುಣ್ಯಸ್ಮರಣೆ ಸೆ.೭ ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡವ ಮಕ್ಕಡ ಕೂಟ ಹಾಗೂ ಅಜ್ಜಮಾಡ ಒಕ್ಕ (ಕುಟುಂಬಸ್ಥರ) ಸಹಯೋಗದಲ್ಲಿ ಬೆಳಗ್ಗೆ ೧೧ ಗಂಟೆಗೆ ಸ್ವಾ.ಲೀ ಅಜ್ಜಮಾಡ ಬಿ.ದೇವಯ್ಯ ವೃತ್ತದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಪುಣ್ಯಸ್ಮರಣೆಯನ್ನು ಆಚರಿಸಲಾಗುವುದು ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾಕುಶಾಲಪ್ಪ, ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ, ಮಾಜಿ ಸಚಿವ ಮೇರಿಯಂಡ ಸಿ.ನಾಣಯ್ಯ, ನಗರಸಭೆ ಅಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರುಗಳಾದ ಶಾಂತೆಯಂಡ ವೀಣಾ ಅಚ್ಚಯ್ಯ, ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ವೆಂಕಟ್‌ರಾಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಫೋರಂ ನ ಅಧ್ಯಕ್ಷ ಕರ್ನಲ್ ಕಡ್ರತಂಡ ಸುಬ್ಬಯ್ಯ, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಸೇರಿದಂತೆ ಕೊಡವ ಮಕ್ಕಡ ಕೂಟದ ಸದಸ್ಯರು, ನಿವೃತ್ತ ಯೋಧರು, ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.