ಕನ್ನಡ ನಾಮಫಲಕ ಶೇ.೬೦ರಷ್ಟು ಕಡ್ಡಾಯ: ವೆಂಕಟ್ ರಾಜಾ

kannada kaddaya
Published on

ಮಡಿಕೇರಿ: ಜಿಲ್ಲೆಯಲ್ಲಿರುವ ಎಲ್ಲಾ ಅಂಗಡಿ, ಹೋಟೆಲ್, ವಾಣಿಜ್ಯ ಸಂಕೀರ್ಣ, ಕೈಗಾರಿಕೋದ್ಯಮ, ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳು ಹಾಗೂ ಪ್ರವಾಸೋದ್ಯಮ ಕೇಂದ್ರಗಳ ನಾಮಫಲಕಗಳಲ್ಲಿ ಶೇ.೬೦ ರಷ್ಟು ಕನ್ನಡ ಭಾಷಾ ಬಳಕೆ ಕಡ್ಡಾಯವಾಗಿದ್ದು, ಈ ಸಂಬಂಧ ತಮ್ಮ ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು.


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಾಮಫಲಕಗಳಲ್ಲಿ ಶೇ.೬೦ರಷ್ಟು ಕನ್ನಡ ಕಡ್ಡಾಯ ಸಂಬಂಧ ಇತ್ತೀಚೆಗೆ ಹೊರಡಿಸಿರುವ ಸರ್ಕಾರದ ಅಧಿಸೂಚನೆ ಹಿನ್ನೆಲೆ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.


ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ, ವಿದೇಯಕ, ೨೦೨೪ ಈ ಸಂಬಂಧ ಫೆ.೨೫ ರಂದು ರಾಜ್ಯಪಾಲರಿಂದ ಒಪ್ಪಿಗೆ ದೊರೆತ್ತಿದ್ದು, ಜಿಲ್ಲೆಯ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ಯಮಗಳ ನಾಮಫಲಕಗಳಲ್ಲಿ ಶೇ.೬೦ ರಷ್ಟು ಕನ್ನಡ ಭಾಷೆ ಇರಲೇಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾರವರು ಸ್ಪಷ್ಟ ನಿರ್ದೇಶನ ನೀಡಿದರು.


ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ, ಮಂಜೂರಾತಿ ಪಡೆದ ಎಲ್ಲಾ ಸಂಸ್ಥೆಗಳಿಗೂ ಈ ಕಾಯ್ದೆ ಅನ್ವಯವಾಗಲಿದೆ. ಖಾಸಗಿ ಶಾಲಾ ಕಾಲೇಜುಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನರಂಜನಾ ಕೇಂದ್ರಗಳು, ಹೋಟೆಲ್ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ನಾಮಫಲಕಗಳ ಮೇಲ್ಬಾಗದಲ್ಲಿ ಕನ್ನಡಭಾಷೆಯನ್ನು ಶೇ.೬೦ ರಷ್ಟು ಬರೆಸಿರಬೇಕು ಎಂದು ಜಿಲ್ಲಾಧಿಕಾರಿ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.


ಜಿಲ್ಲೆಯ ಗಡಿ ಪ್ರದೇಶಗಳು, ಖಾಸಗಿ ಶಾಲೆಗಳಲ್ಲಿ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡಬೇಕು. ಈ ಕಾರ್ಯ ಆಗದಿದ್ದಲ್ಲಿ ಪ್ರಥಮ ಹಂತದಲ್ಲಿ ೫ ಸಾವಿರ, ಎರಡನೇ ಹಂತದಲ್ಲಿ ೧೦ ಸಾವಿರ ದಂಡ ಪಾವತಿಸಬೇಕಾಗುತ್ತದೆ. ನಂತರ ಪರವಾನಿಗೆಯನ್ನು ರದ್ದು ಪಡಿಸಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ, ನಾಮಫಲಕ ಬರೆಸಲು/ ಪ್ರದರ್ಶಿಸಲು ೭ ದಿನಗಳ ಕಾಲಾವಕಾಶ ನೀಡಬೇಕು ಎಂದು ಸಲಹೆ ಮಾಡಿದರು.


ಜಿ.ಪಂ.ಸಿಇಒ ವರ್ಣಿತ್ ನೇಗಿ ಮಾತನಾಡಿ, ನಾಮಫಲಕಗಳಲ್ಲಿ ಶೇ.೬೦ ರಷ್ಟು ಕನ್ನಡ ಭಾಷೆ ಬಳಕೆ ಸಂಬಂಧಿಸಿದಂತೆ ಜಿ.ಪಂ., ತಾ.ಪಂ. ಮತ್ತು ಗ್ರಾ.ಪಂ. ಮಟ್ಟದಲ್ಲಿ ಅಗತ್ಯ ಕ್ರಮವಹಿಸಲಾಗುವುದು ಎಂದರು.


ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಎಂ.ಚಂದ್ರಕಾಂತ್, ನಗರಸಭೆಯ ಪರಿಸರ ಎಂಜಿನಿಯರ್ ಸೌಮ್ಯ, ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net