

ಚಾಮರಾಜನಗರ: ನಗರದ ಈಶ್ವರೀ ಸೋಷಿಯಲ್ ಟ್ರಸ್ಟ್ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಪರಿನಿಬ್ಬಾಣದ ಅಂಗವಾಗಿ 68 ಗಿಡಗಳನ್ನು ನೆಡುವುದರ ಮೂಲಕ ಅಂಬೇಡ್ಕರ್ ಸ್ಮರಣೆ ಮಾಡಲಾಯಿತು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ ಹಿರಿಯ ದಲಿತ ಮುಖಂಡ ವೆಂಕಟರಮಣಸ್ವಾಮಿ (ಪಾಪು) ಮಾತನಾಡಿ, ಈ ದೇಶದ ಸಾರ್ವಭೌಮತ್ವ ಮತ್ತು ಅಖಂಡತೆಯನ್ನು ಎತ್ತಿ ಹಿಡಿಯುವಂತಹ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್ ನೀಡಿದ್ದಾರೆ. ಈ ದೇಶದ ಪ್ರತಿಯೊಬ್ಬ ನಾಗರೀಕರು ಅವರಿಗೆ ಋಣಿಯಾಗಿರಬೇಕಿದೆ. ಅವರ ಹೆಸರಿನಲ್ಲಿ ಪರಿಸರ ಸಂರಕ್ಷಣೆ ಮಾಡುವ ಕೆಲಸ ಮಾಡುತ್ತಿರುವುದು ಅತ್ಯಂತ ಶ್ಲಾಘನೀಯ ಎಂದರು.
ಹೋರಾಟಗಾರ ಸಿ.ಎಂ.ಕೃಷ್ಣಮೂರ್ತಿ ಮಾತನಾಡಿ, ಪರಿಸರ ಪ್ರೇಮಿ ವೆಂಕಟೇಶ್ ಅವರು ಜಿಲ್ಲೆಯಾದ್ಯಂತ ಸಾವಿರಾರು ಗಿಡಗಳನ್ನು ನೆಟ್ಟು, ಪರಿಸರವನ್ನು ಸಂರಕ್ಷಿಸುವ ಕೆಲಸ ಮಾಡುತ್ತಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಹೆಸರಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿರುವುದು ಅತ್ಯಂತ ಮಹತ್ವವಾದ ಕೆಲಸವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸೆಸ್ಕಾಂ ಜೆಇಗಳಾದ ಪ್ರವೀಣ್, ನಂಜುಂಡಸ್ವಾಮಿ, ಬುದ್ಧ ಮಹೇಶ್, ಪರಿಸರ ಪ್ರೇಮಿ ಹಾಗೂ ಈಶ್ವರೀ ಸೋಷಿಯಲ್ ಟ್ರಸ್ಟ್ ಅಧ್ಯಕ್ಷ ವೆಂಕಟೇಶ್ ಹಾಗೂ ಇತರರು ಹಾಜರಿದ್ದರು.