

ರಾಯಚೂರು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಿಂದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗೆ ದಾಖಲು ಮಾಡಿಕೊಳ್ಳುವ ಯೋಜನೆಯಡಿ 2025-26ನೇ ಸಾಲಿನ 6ನೇ ತರಗತಿ ಅರ್ಹತಾ ಪರೀಕ್ಷೆಯು ಮಂಗಳವಾರ ಸುಸೂತ್ರವಾಗಿ ನಡೆಯಿತು.
ಈ ವೇಳೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಚಿದಾನಂದ ಅವರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಗೆ ಒಟ್ಟು 310 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 262 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು, 48 ವಿದ್ಯಾರ್ಥಿಗಳ ಗೈರು ಆಗಿದ್ದರು. ಒಟ್ಟು 13 ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.
ಈ ಸಂದರ್ಭದಲ್ಲಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳಾದ ರಾಜೇಂದ್ರ ಜಲ್ದಾರ್, ಡಯಟ್ ಕಾಲೇಜಿನ ಹಿರಿಯ ಉಪನ್ಯಾಸಕಿ ಶಿವಮ್ಮ ಸೇರಿದಂತೆ ವಿವಿಧ ಅಧಿಕಾರಿಗಳು ಇದ್ದರು.