ಚಾಮರಾಜನಗರ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪರೀಕ್ಷೆಯು ಫೆ.15ರಂದು ಜಿಲ್ಲೆಯ 12 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕಾರ್ಯವು ನ್ಯಾಯೋಚಿತವಾಗಿ ನಡೆಯಲೆಂಬ ಸದುದ್ದೇಶದಿಂದ ಹಾಗೂ ಪರೀಕ್ಷಾ ಅಕ್ರಮಗಳು ನಡೆಯದಂತೆ ತಡೆಗಟ್ಟಲು ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗದಂತೆ ಪರೀಕ್ಷಾ ಕೇಂದ್ರಗಳ ಸುತ್ತಲ 200 ಮೀಟರ್ ವ್ಯಾಪ್ತಿಯನ್ನು ಸಾರ್ವಜನಿಕ ನಿಷೇಧಿತ ಸ್ಥಳವೆಂದು ಘೋಷಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಆದೇಶ ಹೊರಡಿಸಿದ್ದಾರೆ. ಚಾಮರಾಜನಗರ ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಜೆ.ಎಸ್.ಎಸ್ ಮಹಿಳಾ ಪದವಿ ಪೂರ್ವ ಕಾಲೇಜು, ಗುಂಡ್ಲುಪೇಟೆ ಪಟ್ಟಣದ ದೊಡ್ಡಹುಂಡಿ ಭೋಗಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೆ.ಎಸ್. ನಾಗರತ್ನಮ್ಮ ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಯಳಂದೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು, ಜೆ.ಎಸ್.ಎಸ್. ಮಹಿಳಾ ಪದವಿ ಪೂರ್ವ ಕಾಲೇಜು, ಕೊಳ್ಳೇಗಾಲ ಪಟ್ಟಣದ ಸರ್ಕಾರಿ ಎಂಜಿಎಸ್‌ವಿ ಪದವಿ ಪೂರ್ವ ಕಾಲೇಜು, ಎಸ್.ವಿ.ಕೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಹನೂರು ಪಟ್ಟಣದ ಜಿ.ವಿ. ಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜು, ಕ್ರಿಸ್ತರಾಜ ಪದವಿ ಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಬಿ.ಎನ್.ಎಸ್.ಎಸ್ 2023 ಕಲಂ 163ರ ಪ್ರಕಾರ ಪರೀಕ್ಷಾ ದಿನದಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ. ಅಲ್ಲದೇ ಸದರಿ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಬೆಳಿಗ್ಗೆ 6 ರಿಂದ ಸಂಜೆ 5 ಗಂಟೆಯವರೆಗೆ ಮುಚ್ಚಲು ಸಹ ಆದೇಶಿಸಲಾಗಿದೆ.