ಮೂರ್ತಿ ಪ್ರತಿಷ್ಠಾಪನೆ ಅನುಮತಿಗೆ 75 ಏಕಗವಾಕ್ಷಿ ಕೇಂದ್ರ: ಗಣೇಶೋತ್ಸವಕ್ಕೆ ಬಿಬಿಎಂಪಿ ಉಪಕ್ರಮ

bbmp office
Published on

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ಬಾರಿ ಗಣೇಶೋತ್ಸವ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ವಿವಿಧ ಇಲಾಕೆಗಳಿಂದ ಪರವಾನಗಿ ಪಡೆಯಲು 75 ಏಕಗವಾಕ್ಷಿ ಕೇಂದ್ರಗಳನ್ನು ಆರಂಭಿಸಲು ಪಾಲಿಕೆ ನಿರ್ಧರಿಸಿದೆ. ಈ ತಿಂಗಳ 27ರಿಂದ ಸೆ.17ರ ವರೆಗೆ ಮಾತ್ರ ಸಾರ್ವಜನಿಕ ಮೂರ್ತಿ ಪೂಜೆಗೆ ಅವಕಾಶ ಮಾಡಿಕೊಡಲಾಗಿದ್ದು, ಆನಂತರದಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಇಲ್ಲವೆಂದು ಸ್ಪಷ್ಟಪಡಿಸಲಾಗಿದೆ.

ಗಣೇಶ ಚತುರ್ಥಿ ಹಿನ್ನೆಲೆ ಈಗಾಗಲೇ ಪೊಲೀಸ್ ಠಾಣೆವಾರು ಸಭೆಗಳನ್ನು ಆಯೋಜಿಸಲಾಗಿದೆ. ಬಿಬಿಎಂಪಿ ಕೂಡ ಸಮನ್ವಯ ಸಭೆ, ಶಾಂತಿ ಸಭೆಯನ್ನು ನಡೆಸಿ ಅಗತ್ಯ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ನಾಗರಿಕರಿಗೆ ತೊಂದರೆ ಆಗದಂತೆ ಗಣೇಶೋತ್ಸವ ಆಚರಿಸುವಂತೆ ಕರೆ ನೀಡಿದ್ದು, ಮೂರ್ತಿಗಳ ವಿಸರ್ಜನೆಗೆ ಕಲ್ಯಾಣಿ ಹಾಗೂ ಸಂಚಾರಿ ವಾಹನಗಳ ವ್ಯವಸ್ಥೆ ಮಾಡಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆ ಅಂಗಳದ ಶಾಶ್ವತ/ತಾತ್ಕಾಲಿಕ ಕಲ್ಯಾಣಿ ಮತ್ತು 489 ಕಡೆಗಳಲ್ಲಿ ತಾತ್ಕಾಲಿಕ ಸಂಚಾರಿ ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಆಯಾ ವಾರ್ಡ್‌ಗಳಲ್ಲಿ ಯಾವುದೇ ಸಮಸ್ಯೆ ಆಗದಿರಲು ಕ್ರಮ ಕೈಗೊಳ್ಳಲಾಗಿದೆ. ಇವುಗಳ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅದರ ವಿವರಗಳಿಗಾಗಿ ಬಿಬಿಎಂಪಿ ವೆಬ್​​ಸೈಟ್​​ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯಡಿಯೂರಿನಲ್ಲಿ ಮೂರ್ತಿ ವಿಸರ್ಜನೆಗೆ ವ್ಯವಸ್ಥೆ:

ನಗರದ ಯಡಿಯೂರು ಕೆರೆಯ ಕಲ್ಯಾಣಿಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗಾಗಿ ಆ.27ರಿಂದ ಸೆ.17ರವರೆಗೆ ಅವಕಾಶ ಕಲ್ಪಿಸಲಾಗಿದೆ. ಪರಿಸರ ಸ್ನೇಹಿ ಅಥವಾ ಮಣ್ಣಿನಿಂದ ಮಾಡಿರುವ ಗಣೇಶ ಮೂರ್ತಿಗಳನ್ನು ಮಾತ್ರ ವಿಸರ್ಜನೆ ಮಾಡಬಹುದಾಗಿದೆ. ಆದರೆ, ಆರ್.ಆರ್.ನಗರ ವಲಯದ ಹೇರೋಹಳ್ಳಿ ಕೆರೆಯ ಕಲ್ಯಾಣಿಯಲ್ಲಿ ತಾಂತ್ರಿಕ ಕಾರಣದಿಂದ ಗಣೇಶ ಮೂರ್ತಿ ವಿಸರ್ಜಿಸಲು ಅವಕಾಶ ಇಲ್ಲ ಎಂದು ಪಾಲಿಕೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net