75 ವಾರ ವಿಶೇಷ ಕಾರ್ಯಕ್ರಮ, ಜಿಲ್ಲಾಧಿಕಾರಿ ಶ್ರೀನಿವಾಸ್ ಮಾಹಿತಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಗೆ ಸಿದ್ಧತೆ

12 dpt 4 akramavagi mnnannu tegeyutturuvudu
Published on

ಬೆಂಗಳೂರು ಗ್ರಾಮಾಂತರ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಗ್ರಾಮಾಂತರ ಜಿಲ್ಲಾದ್ಯಂತ ಜಿಲ್ಲಾ ಹಾಗೂ ತಾಲೂಕುಮಟ್ಟದಲ್ಲಿ 75 ವಾರಗಳ ಕಾಲ ವಿಶೇಷ ಕಾರ್ಯಕ್ರಮ ಆಯೋಜಿಸುವ ಮೂಲಕ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ವಿಶೇಷವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.

ದೇವನಹಳ್ಳಿ ತಾಲೂಕು ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿರುವ ಜಿಪಂ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ವಿದ್ಯಾರ್ಥಿಗಳಿಂದ ಸೈಕಲ್ ಜಾಥಾ, ಆರೋಗ್ಯ ಶಿಬಿರ, ಸ್ವಚ್ಛತಾ ಕಾರ್ಯ, ಮ್ಯಾರಥಾನ್ ಹಾಗೂ ವಾಕಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿನ 75 ಕೆರೆಗಳ ಹೂಳೆತ್ತುವುದು, 75 ಕಲ್ಯಾಣಿಗಳ ಸ್ವಚ್ಛತೆ, 75 ಅಂಗನವಾಡಿಗಳಲ್ಲಿ ಕಿಚನ್ ಗಾರ್ಡನ್, ಶಾಲೆಗಳಲ್ಲಿ ಕ್ರೀಡಾಂಗಣದ ಅಭಿವೃದ್ಧಿ, ಯೋಗ ಶಿಬಿರ, ಎನ್‌ಎಸ್‌ಎಸ್, ಎನ್‌ಸಿಸಿ, ಭಾರತೀಯ ಸೇವಾದಳ ಹಾಗೂ ಲಯನ್ ಕ್ಲಬ್ ಸಹಯೋಗದಲ್ಲಿ ಆಯೋಜಿಸುವಂತೆ ಕಾರ್ಯಕ್ರಮ ರೂಪಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವೃದ್ಧಾಶ್ರಮ, ಅನಾಥಾಶ್ರಮ, ಅಂಗವಿಕಲರ ಶಾಲೆಗಳು, ಶಾಲಾ-ಕಾಲೇಜು, ಹಾಸ್ಟೆಲ್‌ಗಳು ಹಾಗೂ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದೇಶಭಕ್ತಿ ಸಾರುವಂತಹ ಕಾರ್ಯಕ್ರಮ ಹಾಗೂ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸುವ ಜತೆಗೆ ಸ್ವಾತಂತ್ರ್ಯ ಹೋರಾಟದ ಬಗ್ಗೆ ಉಪನ್ಯಾಸ ನೀಡಬೇಕು ಎಂದರು.

ಜಿಲ್ಲೆಯಲ್ಲಿ ಪ್ರಸ್ತುತ ಇರುವ ಸ್ವಾತಂತ್ರ್ಯ ಹೋರಾಟಗಾರರನ್ನು ಗುರುತಿಸಿ, ಅವರನ್ನು ಸನ್ಮಾನಿಸುವ ಜತೆಗೆ ಅವರಿಂದ ಸಾರ್ವಜನಿಕರಿಗೆ ಉಪನ್ಯಾಸ ನೀಡಲು ವ್ಯವಸ್ಥೆ ಕಲ್ಪಿಸಬೇಕು ಹಾಗೂ ಸ್ಥಳೀಯ ಇತಿಹಾಸ, ಸ್ಥಳೀಯ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಯುವಜನತೆಗೆ ತಿಳಿಸಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್ ಕೆ.ನಾಯಕ್ ಮಾತನಾಡಿ, ಜಿಲ್ಲೆಯಲ್ಲಿ ವಿವಿಧ ಇಲಾಖೆಯಿಂದ ವಿವಿಧ ಇಲಾಖೆಯ ಯೋಜನೆಗಳನ್ನು ಹಾಗೂ ಸವಲತ್ತು ಪರಿಚಯಿಸುವ ವಸ್ತು ಪ್ರದರ್ಶನ ನಡೆಸಬೇಕು ಎಂದರು.

ನಗರಸಭೆ ವ್ಯಾಪ್ತಿಯಲ್ಲಿನ ವಿಶೇಷ ಪಾರಂಪರಿಕ ಕಟ್ಟಡಗಳಲ್ಲಿ ವಸ್ತು ಪ್ರದರ್ಶನ ಆಯೋಜಿಸುವ ಜತೆಗೆ ಪಾರಂಪರಿಕ ತಾಣಗಳು ಮತ್ತು ಕೋಟೆಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು ಹಾಗೂ ಪ್ಲಾಸ್ಟಿಕ್‌ಮುಕ್ತ ಮಾಡುವಲ್ಲಿ ಶ್ರಮಿಸಬೇಕು ಎಂದರು.

ಸ್ಥಳೀಯ ಸಾಂಸ್ಕೃತಿಕ ಪ್ರಕಾರಗಳನ್ನು ಗುರುತಿಸಿ ಕಾರ್ಯಕ್ರಮ ಆಯೋಜಿಸಬೇಕು ಹಾಗೂ ಕರಕುಶಲ ವಸ್ತುಗಳ ಪ್ರದರ್ಶನ ಏರ್ಪಡಿಸುವ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು.

ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಆರಾಧ್ಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಭವ್ಯಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಆರ್.ಗೀತಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುಳಾದೇವಿ ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net