ಗಣಿನಾಡಿನಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ

BLY-26-2 (B)
ಬಳ್ಳಾರಿ ನಗರದ ವಿಮ್ಸ್ ಮೈದಾನದಲ್ಲಿ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದ ವೈ.ಎಸ್.ಯೋಗೇಶ್, ಡಿ.ಎಂ.ಲಿಪಿಕ, ರಜನಿ ಲಕ್ಕ, ಕುನಾಲ್.ಎಚ್., ಮಹಮ್ಮದ್ ಯಾಸೀನ್ ಅವರನ್ನು ಸನ್ಮಾನಿಸಲಾಯಿತು.
Published on

ಬಳ್ಳಾರಿ: ಭಾರತವು ಸಮಾಜವಾದ ತತ್ವ, ಪ್ರಜಾಪ್ರಭುತ್ವ, ಗಣರಾಜ್ಯದ ಮತ್ತು ಜಾತ್ಯತೀತ ತತ್ವದ ಸಾರ್ವಭೌಮತ್ವನ್ನು ಆಳವಡಿಸಿಕೊಂಡಿದ್ದು, ವಿವಿಧತೆಯಲ್ಲಿ ಏಕತೆಯನ್ನು ಹೊಂದಿದೆ. ಅನೇಕ ಭಾಷೆಗಳನ್ನು ಮಾತನಾಡುವ ಜನ ಹಾಗೂ ವಿವಿಧ ಸಾಂಸ್ಕೃತಿಕ ಹಿನ್ನೆಲೆಯನ್ನು ಹೊಂದಿರುವುದು ವೈಶಿಷ್ಟಮಯವಾಗಿದೆ ಎಂದು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಹೇಳಿದರು.

ನಗರದ ವಿಮ್ಸ್ ಮೈದಾನದಲ್ಲಿ ಜಿಲ್ಲಾಡಳಿತ ವತಿಯಿಂದ ಏರ್ಪಡಿಸಿದ್ದ 75ನೇ ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ಧ್ವಜಾರೋಹಣ ನೆರವೇರಿಸಿ, ಪಥ ಸಂಚಲನ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿ ಧ್ವಜಾರೋಹಣ ಸಂದೇಶ ನೀಡಿ ಅವರು ಮಾತನಾಡಿದರು.

ದೇಶಕ್ಕೆ ಪ್ರಜಾಪ್ರಭುತ್ವದ ಆಡಳಿತ ಪದ್ಧತಿಯನ್ನು ಅಳವಡಿಸಿಕೊಂಡ ಸಂಭ್ರಮದ ದಿನ ಇಂದು. 1950 ರಂದು ಜನವರಿ 26 ರಂದು ಇಡೀ ಸ್ವತಂತ್ರ ಭಾರತವನ್ನು ಗಣರಾಜ್ಯವೆಂದು ಘೋಷಿಸಲಾಯಿತು. ಅದೇ ದಿನದಂದು ಮಹಾನ್ ಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಭಾರತದ ಸಂವಿಧಾನ ಜಾರಿಗೊಂಡಿತು. ಭಾರತದ ಸಂವಿಧಾನ ಶಿಲ್ಪಿ, ಮಹಾನ್ ಮಾನವತಾವಾದಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಸದಾ ಸ್ಮರಿಸಲೇಬೇಕು ಎಂದರು.

ಬ್ರಿಟಿಷ್ ಸಂಸತ್ತು ಪದ್ಧತಿಯನ್ನು ಅನುಸರಿಸಿದ ಭಾರತದ ಪ್ರಜಾಪ್ರಭುತ್ವಕ್ಕೆ ಅನೇಕ ಸವಾಲುಗಳು ಬಂದರೂ, ನಮ್ಮ ಪ್ರಜಾಪ್ರಭುತ್ವದ ನೆಲೆಗಟ್ಟು ಅಲುಗಾಡದೆ ಗಟ್ಟಿಯಾಗಿ ನಿಂತಿದೆ. ನಮ್ಮ ಸಂವಿಧಾನದ ಪ್ರಸ್ತಾವನೆಯಲ್ಲಿ ದೇಶದ ಜನ-ಜೀವನದ ಆಶೋತ್ತರಗಳು ಹುದುಗಿವೆ. ಅವುಗಳನ್ನು ಸಾಕಾರಗೊಳಿಸುವ ಪ್ರಯತ್ನದಲ್ಲಿ ನಾವು ತೊಡಗಿಸಿಕೊಳ್ಳಬೇಕು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂವಿಧಾನಾತ್ಮಕವಾಗಿ ನಮ್ಮ ದೇಶದ ರಾಷ್ಟ್ರಧ್ವಜ, ರಾಷ್ಟ್ರಗೀತೆ, ರಾಷ್ಟ್ರಲಾಂಛನಗಳು ರಾಷ್ಟ್ರದ ಅಸ್ತಿತ್ವ, ಸಾರ್ವಭೌಮತ್ವವನ್ನು ಸಾರುತ್ತಿವೆ. ಇವುಗಳಿಗೆ ಗೌರವ ತೋರುವುದು, ಗೌರವ ದೊರಕಿಸಿಕೊಡುವುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯವಾಗಿದೆ ಎಂದರು.

ಐದು ಗ್ಯಾರಂಟಿ ಯೋಜನೆ ಅನುಷ್ಟಾನ
ಜನಪರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಬಳ್ಳಾರಿ ಜಿಲ್ಲೆಯ ಫಲಾನುಭವಿಗಳು ಸಾಕಷ್ಟು ಇದರ ಸದುಪಯೋಗ ಪಡೆದಿದ್ದಾರೆ. ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ 2,51,798 ಫಲಾನುಭವಿಗಳು, ಗೃಹಲಕ್ಷ್ಮಿ ಯೋಜನೆಯಡಿ 2,69,668 ಫಲಾನುಭವಿಗಳು, ಅನ್ನಭಾಗ್ಯ ಯೋಜನೆಯಡಿ 2,61,866 ಫಲಾನುಭವಿಗಳು, ಶಕ್ತಿ ಯೋಜನೆಯಡಿ 1,28,43,670 ಫಲಾನುಭವಿಗಳು ಸದುಪಯೋಗ ಪಡೆದುಕೊಂಡಿದ್ದಾರೆ. ಯುವನಿಧಿ ಯೋಜನೆಯನ್ನು ಜ.12 ರಂದು ರಾಜ್ಯದ ಮುಖ್ಯಮಂತ್ರಿ ಅವರಿಂದ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಭಾರತವನ್ನು ಜಗತ್ತಿನ ಅತ್ಯಂತ ಪ್ರಬುದ್ಧ, ಪ್ರಗತಿಪರ, ಭದ್ರ, ಬಲಿಷ್ಠ ರಾಷ್ಟ್ರವನ್ನಾಗಿ ರೂಪಿಸಲು ನಾವೆಲ್ಲ ಒಂದಾಗಿ ಒಗ್ಗೂಡಬೇಕಾಗಿದೆ. ಜಿಲ್ಲೆಯನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಆಕರ್ಷಕ ಪಥಸಂಚಲನ
75ನೇ ಗಣರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ಪಥಸಂಚಲನೆಯ ದಳಗಳ ದಳಪತಿಗಳಾದ ಡಿಎಆರ್‌ನ ಆರ್‌ಪಿಐ ಗೋವಿಂದ್.ಎ ಅವರ ನೇತೃತ್ವದಲ್ಲಿ 30 ತಂಡಗಳ ಪರೇಡ್ ಅಚ್ಚುಕಟ್ಟಾಗಿ ನಡೆಯಿತು. ಪಥಸಂಚಲನದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ತಂಡಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರನ್ನು ಮನ ಸೆಳೆದವು.

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಪಾಲಿಕೆ ಮೇಯರ್ ಬಿ.ಶ್ವೇತಾ, ಉಪ ಮೇಯರ್ ಬಿ.ಜಾನಕಿ, ಐಜಿಪಿ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಎಸ್‌ಪಿ ರಂಜಿತ್‌ಕುಮಾರ್ ಬಂಡಾರು, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಎಡಿಸಿ ಮಹಮ್ಮದ್ ಜುಬೇರ್, ಸಹಾಯಕ ಆಯುಕ್ತ ಹೇಮಂತ್ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಮಹಾನಗರ ಪಾಲಿಕೆಯ ಸದಸ್ಯರು, ಜನಪ್ರತಿನಿಧಿಗಳು ಶಾಲೆ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಬಹುಮಾನ ವಿತರಣೆ ಮತ್ತು ಸನ್ಮಾನ
ಆಕರ್ಷಕ ಪಥಸಂಚನದಲ್ಲಿ ಪಾಲ್ಗೊಂಡಿದ್ದ ಶಾಲೆಗಳಿಗೆ ಬಹುಮಾನ ವಿತರಿಸಲಾಯಿತು. ಪ್ರಾಥಮಿಕ ಶಾಲೆ ವಿಭಾಗದಲ್ಲಿ ಕಿವುಡ ಮತ್ತು ಮೂಗ ಮಕ್ಕಳ ಶಾಲೆ(ಪ್ರಥಮ), ಎಂಜಿಎಂ ಪ್ರಾಥಮಿಕ ಶಾಲೆ(ದ್ವಿತೀಯ), ಬಾಲಭಾರತಿ ಪ್ರಾಥಮಿಕ ಶಾಲೆ(ತೃತೀಯ).
ಪ್ರೌಢಶಾಲೆ ವಿಭಾಗದಲ್ಲಿ ಸಂತಜಾನರ ಪ್ರೌಢಶಾಲೆ(ಪ್ರಥಮ), ಸತ್ಯ ಪ್ರೌಢಶಾಲೆ (ದ್ವಿತೀಯ), ಸರ್ಕಾರಿ ಪ್ರೌಢಶಾಲೆ ಬಂಡಿಹಟ್ಟಿ(ತೃತೀಯ).
ಕಾರ್ಯಕ್ರಮದಲ್ಲಿ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದ ವೈ.ಎಸ್.ಯೋಗೇಶ್, ಡಿ.ಎಂ.ಲಿಪಿಕ, ರಜನಿ ಲಕ್ಕ, ಕುನಾಲ್.ಎಚ್., ಮಹಮ್ಮದ್ ಯಾಸೀನ್, ದೀಕ್ಷಿತ್.ಕೆ.ಎಸ್., ಇ.ಜಾಸ್ಮೀನ್, ತ್ರಿಶೀಕಾ.ಪಿ., ನಿವೇದಿತಾ ಅವರನ್ನು ಸನ್ಮಾನಿಸಲಾಯಿತು.

ನಂತರ ಎಬಿ-ಪಿಎಂಜೆಎವೈ-ಮುಖ್ಯಮಂತ್ರಿ ಅಭಾ ಯೋಜನೆಯಡಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿರುವ ಆರೋಗ್ಯ ಸಂಸ್ಥೆಗಳಾದ ಕುರುಗೋಡು, ಮೋಕಾ ಸಮುದಾಯ ಆರೋಗ್ಯಕೇಂದ್ರ, ಬಳ್ಳಾರಿ ಹೃದಯಾಲಯ ಆಸ್ಪತ್ರೆ ಮತ್ತು ಚೋರನೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು. ಬಳಿಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಕೊಳವೆ ಬಾವಿ ಕೊರೆಯಿಸಿಕೊಂಡ 33 ಫಲಾನುಭವಿಗಳಿಗೆ ಮೋಟಾರ್ ಪಂಪ್ ಮತ್ತು ವಿದ್ಯುತ್ ಪರಿಕರಗಳನ್ನು ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net