75ನೇ ಸ್ವಾತಂತ್ರ್ಯ ದಿನಾಚರಣೆಗೆ ಸಿದ್ಧತೆ, ಕೋವಿಡ್ ನಿಯಮಗಳೊಂದಿಗೆ ಕಾರ್ಯಕ್ರಮ ರೂಪಿಸಲು ಡಿಸಿ ಸೂಚನೆ

b81482be-a99f-4f41-9f02-ad77944b551b
Published on

ಬೆಂಗಳೂರು ಗ್ರಾಮಾಂತರ: ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ಕಟ್ಟುನಿಟ್ಟಿನ ಕೋವಿಡ್ ನಿಯಮಗಳೊಂದಿಗೆ ಆಚರಿಸಬೇಕು ಇದಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸೂಚಿಸಿದರು.

ದೇವನಹಳ್ಳಿ ತಾಲೂಕು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ 75ನೇ ಸ್ವಾತಂತ್ರ್ಯ ದಿನ ಆಚರಿಸುವ ಸಂಬಂಧ ಗುರುವಾರ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಕಾರ್ಯಕ್ರಮ ನಡೆಯಲಿರುವ ದೇವನಹಳ್ಳಿ ತಾಲೂಕು ಕ್ರೀಡಾಂಗಣದಲ್ಲಿ ಆರೋಗ್ಯ ಇಲಾಖೆ ಕೋವಿಡ್ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು.ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಹಾಜರಾಗಬೇಕು ಎಂದು ತಿಳಿಸಿದರು.

ಹೋರಾಟಗಾರರಿಗೆ ಸನ್ಮಾನ: ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜಿಲ್ಲೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಲಾಗುವುದು ಹಾಗೂ ಕೋವಿಡ್ ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಪೌರ ಕಾರ್ಮಿಕರನ್ನು ಗೌರವಿಸಲಾಗುವುದು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪಟ್ಟಿ ಸಿದ್ಧಪಡಿಸಬೇಕು ಎಂದು ಡಿಸಿ ಸೂಚನೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದು, ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡಬೇಕು. ಕ್ರೀಡಾಂಗಣ ಸೇರಿ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡುವಂತೆ ಪುರಸಭೆ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಅಭಿವೃದ್ಧಿಯ ಕುರಿತು ಭಾಷಣ ಮಾಡಲಿದ್ದು, ಎಲ್ಲ ಇಲಾಖೆಗಳು ನಿಗದಿತ ದಿನಾಂಕದೊಳಗೆ ಇಲಾಖೆಯ ಅಭಿವೃದ್ಧಿ ಮಾಹಿತಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಸಲ್ಲಿಸಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ.ನಾಯಕ್ ಮಾತನಾಡಿ, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ರೂಪಿಸಬೇಕು, ಮೂಲಸೌಕರ್ಯ ಸೇರಿ ಮಾಸ್ಕ್, ಸ್ಯಾನಿಟೈಸರ್ ವ್ಯವಸ್ಥೆ ಕಡೆ ಹೆಚ್ಚಿನ ಗಮನ ಕೊಡಬೇಕು, ಪರಸ್ಪರ ಅಂತರ ಕಾಯ್ದುಕೊಳ್ಳುವಂಗೆ ನಿಗಾವಹಿಸಬೇಕು ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ ಮಾತನಾಡಿ, ಜಿಲ್ಲಾಡಳಿತ ನಿರ್ದೇಶನದಂತೆ ಸ್ವಾತಂತ್ರ್ಯ ದಿನಾಚರಣೆಯಂದು ಕೋವಿಡ್ ನಿಯಮಗಳೊಂದಿಗೆ ಕಾರ್ಯನಿರ್ವಹಿಸಲಾಗುವುದು, ಈ ಬಗ್ಗೆ ತಾಲೂಕು ಆರೋಗ್ಯಾಧಿಕಾರಿಗಳಿಗೂ ಸಲಹೆ ಸೂಚನೆಗಳನ್ನು ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಅಪರ ಪೊಲೀಸ್ ಅಧೀಕ್ಷಕ ಲಕ್ಷ್ಮೀ ಗಣೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕಿ ಸುಮಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀಧರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಭವ್ಯಾ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ ಆರಾಧ್ಯ ಮತ್ತಿತತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net