7ರಂದು ಯಳಂದೂರಿಗೆ ಮುಖ್ಯಮಂತ್ರಿ

Congress-kollegala-A.R.KrishnnaMooruthy 2
Published on

ಯಳಂದೂರು: ಡಿ.7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯಳಂದೂರು ಪಟ್ಟಣಕ್ಕೆ ಭೇಟಿ ನೀಡಲಿದ್ದು 35 ಕೋಟಿ ರೂ. ವೆಚ್ಚದ ಆಸ್ಪತ್ರೆ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಪಟ್ಟಣಕ್ಕೆ ಇದೊಂದು ಅಪೂರ್ವ ಕೊಡುಗೆಯಾಗಿದ್ದು, ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಶಾಸಕ ಎ.ಆರ್.ಕೃಷ್ಣಮೂರ್ತಿ ಮನವಿ ಮಾಡಿದರು.

ವೇದಿಕೆ ಕಾರ್ಯಕ್ರಮ ನಡೆಯಲಿರುವ ಸರ್ಕಾರಿ ಪಬ್ಲಿಕ್ ಶಾಲಾ ಆವರಣವನ್ನು ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಸಿಇಒ ಮೋನಾರೌತ್ ಹಾಗೂ ಇತರ ಅಧಿಕಾರಿಗಳ ಜತೆ ಅವರು ಸೋಮವಾರ ಸಂಜೆ ಸ್ಥಳ ಪರಿಶೀಲನೆ ನಡೆಸಿ ನಂತರ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ನಡೆದ ಸದಸ್ಯರು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದರು.

ಯಳಂದೂರು ತಾಲೂಕು ಕೇಂದ್ರಕ್ಕೆ ಒಂದು ಸುಸಜ್ಜಿತ ಆಸ್ಪತ್ರೆ ಕಟ್ಟಡ ಬೇಕೆಂದು ನಾನು ಸದನದಲ್ಲಿ ಪ್ರಸ್ತಾಪ ಮಾಡಿದ್ದೆ. ಇದಕ್ಕೆ ಮುಖ್ಯಮಂತ್ರಿ ಸ್ಪಂದಿಸಿ ಬಜೆಟ್‌ನಲ್ಲಿ ಇದಕ್ಕೆ ಅನುದಾನ ಘೋಷಿಸಿದ್ದರು. ಈಗ ಅನುದಾನವನ್ನು ನೀಡಿದ್ದು ಟೆಂಡರ್ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು ಡಿ.7 ರಂದು ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿ ಇಲ್ಲಿಗೆ ಬರಲಿದ್ದಾರೆ ಎಂದು ತಿಳಿಸಿದರು.

ಇದಕ್ಕಾಗಿ ಈಗಾಗಲೇ ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಪಟ್ಟಣದ ಸರ್ಕಾರಿ ಪಬ್ಲಿಕ್ ಶಾಲೆಯ ಆವರಣದಲ್ಲಿ ಕಾರ್ಯಕ್ರಮ ನಿಗದಿಯಾಗಿದ್ದು ಈ ಮೈದಾವನ್ನು ಸಿದ್ಧಗೊಳಿಸುವಂತೆ ಸೂಚನೆ ನೀಡಲಾಗಿದೆ. ಬಹುದಿನಗಳ ಬೇಡಿಕೆಯಾಗಿದ್ದ ಆಸ್ಪತ್ರೆಯನ್ನು ನನ್ನ ಕ್ಷೇತ್ರದ ಯಳಂದೂರಿಗೆ ನೀಡಿರುವುದರಿಂದ ಪಟ್ಟಣ ಪಂಚಾಯಿತಿ ಸದಸ್ಯರೂ ಸೇರಿದಂತೆ ಪಟ್ಟಣದ ನಾಗರಿಕರು, ತಾಲೂಕು ವ್ಯಾಪ್ತಿಯ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು.

ಅಲ್ಲದೆ ಪಟ್ಟಣದಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಹಾಗೂ ಬಿಳಿಗಿರಿರಂಗನಬೆಟ್ಟದಲ್ಲಿ ಹೊಸದಾಗಿ ಬಸ್ ನಿಲ್ದಾಣ ನಿರ್ಮಾಣ ಹಾಗೂ ಸಂತೆಮರಹಳ್ಳಿಯಲ್ಲಿರುವ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಇದ್ದ ರೇಷ್ಮೆ ಇಲಾಖೆ ಕಚೇರಿಯ ಹಳೇ ಕಟ್ಟಡದಲ್ಲಿ ನೂತನ ಬಸ್ ನಿಲ್ದಾಣ ನಿರ್ಮಾಣ ಮಾಡಲೂ ಕ್ರಮ ವಹಿಸಲಾಗುವುದು ಎಂದು ಮಾಹಿತಿ ನೀಡಿದರು.

ಪಪಂ ಅಧ್ಯಕ್ಷೆ ಲಕ್ಷ್ಮೀ ಮಲ್ಲು, ಸದಸ್ಯರಾದ ಮಹೇಶ್, ವೈ.ಜಿ.ರಂಗನಾಥ, ಮಂಜು, ಬಿ. ರವಿ, ಸುಶೀಲಾ ಪ್ರಕಾಶ್ ನಾಮನಿರ್ದೇಶಿತ ಸದಸ್ಯರಾದ ಲಿಂಗರಾಜಮೂರ್ತಿ, ಮುನವ್ವರ್‌ಬೇಗ್, ಶ್ರೀಕಂಠಸ್ವಾಮಿ ಮಾಜಿ ಸದಸ್ಯ ಜೆ.ಶ್ರೀನಿವಾಸ್, ಜಿಪಂ ಮಾಜಿ ಉಪಾಧ್ಯಕ್ಷ ಜೆ. ಯೋಗೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಕಂದಹಳ್ಳಿ ನಂಜುಂಡಸ್ವಾಮಿ, ರೂಪೇಶ್, ರಾಘು, ಕಿನಕಹಳ್ಳಿ ಪ್ರಭುಪ್ರಸಾದ್ ಸೇರಿದಂತೆ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net