

ಶಿವಮೊಗ್ಗ: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಏಪ್ರಿಲ್ 1ರಿಂದ 30ರವರೆಗೆ ಜಾನುವಾರುಗಳಿಗೆ 5ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಎಲ್ಲ ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಶೇ.100ರಷ್ಟು ಪ್ರಗತಿ ಸಾಧಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಾನುವಾರುಗಳಿಗೆ 5ನೇ ಸುತ್ತಿನ ಉಚಿತ ಕಾಲುಬಾಯಿ ಲಸಿಕಾ ಕಾರ್ಯಕ್ರಮ, ಜಿಲ್ಲಾಮಟ್ಟದ ಬೀದಿ ನಾಯಿಗಳ ಸಂತಾನ ನಿಯಂತ್ರಣ(ಎಬಿಸಿ) ಹಾಗೂ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯಕಾರಿ ಸಮಿತಿ ಸಭೆ ನಡೆಸಿದ ಅವರು, ರೈತರಿಗೆ ಆರ್ಥಿಕ ಸಂಕಷ್ಟವನ್ನು ತಂದೊಡ್ಡುವ ಕಾಲುಬಾಯಿ ರೋಗವನ್ನು ನಿಯಂತ್ರಿಸಿ ನಿರ್ಮೂಲನೆ ಮಾಡಲು ಎಲ್ಲ ರೈತರು ಪ್ರತಿ 6 ತಿಂಗಳಿಗೊಮ್ಮೆ ಈ ರೋಗದ ವಿರುದ್ಧ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಹಾಗೂ ಪಶು ವೈದ್ಯಾಧಿಕಾರಿಗಳು ಎಲ್ಲ ತಾಲೂಕುಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಎಮ್ಮೆ ಮತ್ತು ದನಗಳಿಗೆ ಕಾಲುಬಾಯಿ ಲಸಿಕೆ ಹಾಕಬೇಕು ಎಂದರು.
ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ. ಶಿವಯೋಗಿ ಯಲಿ ಮಾತನಾಡಿ, ಜಿಲ್ಲೆಯಲ್ಲಿ 5.40 ಲಕ್ಷ ಜಾನುವಾರುಗಳಿದ್ದು ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ, ಸಾಗರ ತಾಲೂಕುಗಳಲ್ಲಿ ಏ.30ರೊಳಗೆ ಶೇ.100ರಷ್ಟು ಲಸಿಕೆ ಗುರಿ ಸಾಧಿಸಲಾಗುವುದು. ತೀರ್ಥಹಳ್ಳಿ ಮತ್ತು ಹೊಸನಗರ ತಾಲೂಕುಗಳಲ್ಲಿ ಮನೆಗಳು ದೂರ ದೂರ ಇರುವುದರಿಂದ ಶೇ.100ರಷ್ಟು ಪ್ರಗತಿ ಸಾಧಿಸಲು ಸ್ವಲ್ವ ಹೆಚ್ಚುವರಿ ಸಮಯ ಬೇಕಾಗುತ್ತದೆ. 4ನೇ ಸುತ್ತಿನಲ್ಲಿ ಸಹ ಸ್ವಲ್ಪ ಹೆಚ್ಚುವರಿ ಸಮಯ ಪಡೆಯಲಾಗಿತ್ತು ಎಂದರು.
ಜಿಲ್ಲೆಯಲ್ಲಿ ಪೆಟ್‌ಶಾಪ್, ಪೆಟ್ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್ ನಡೆಸಲು ಪರವಾನಗಿಯನ್ನು ಪಡೆಯಬೇಕು. ಈಗಾಗಲೇ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ, ಸಮರ್ಪಕವಾಗಿದ್ದಲ್ಲಿ ಅನುಮತಿ ನೀಡಬೇಕು. ಅನಧಿಕೃತವಾಗಿರುವ ಶಾಪ್ ಮತ್ತು ವೈದ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.
ಪ್ರತಿವರ್ಷ ನಿಯಮಿತವಾಗಿ ಬೀದಿ ನಾಯಿಗಳ ಸಂತಾನ ನಿಯಂತ್ರಣ ಕಾರ್ಯಕ್ರಮ ಅನುಷ್ಠಾನಗೊಳಿಸಬೇಕು. ಎಬಿಸಿ ರೂಲ್ಸ್ 2023 ನಿಯಮಗಳನ್ವಯ ಸ್ಥಳೀಯಮಟ್ಟದಲ್ಲಿ ಪ್ರಾಣಿ ಜನನ ನಿಯಂತ್ರಣ ಮತ್ತು ಆಂಟಿ ರೇಬಿಸ್ ಚುಚ್ಚುಮದ್ದು ಮೇಲ್ವಿಚಾರಣೆ ಸಮಿತಿ ರಚಿಸಬೇಕು ಎಂದು ಸೂಚನೆ ನೀಡಿದರು.
ಉಚಿತ ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಪೋಸ್ಟರ್ ಅನ್ನು ಜಿಲ್ಲಾಧಿಕಾರಿಗಳು ಮತ್ತು ಇತರೆ ಅಧಿಕಾರಿಗಳು ಬಿಡುಗಡೆಗೊಳಿಸಿದರು. ಜಿಪಂ ಸಿಇಒ ಸ್ನೇಹಲ್ ಲೋಖಂಡೆ, ಎಎಸ್ಪಿ ಅನಿಲ್ಕುಮಾರ್ ಭೂಮರಡ್ಡಿ, ಡಿಎಚ್‌ಒ ಡಾ. ನಟರಾಜ್, ಪಾಲಿಕೆ ಪಶು ವೈದ್ಯಾಧಿಕಾರಿ ಡಾ. ರೇಖಾ, ಡಾ. ಉಮಾದೇವಿ ಎಲ್ಲ ತಾಲೂಕುಗಳ ಮುಖ್ಯ ಪಶುವೈದ್ಯಾಧಿಕಾರಿಗಳು, ಮಹಾವೀರ ಗೋಶಾಲೆಯ ಪ್ರಕಾಶ್‌ಚಂದ್ರ ಜೈನ್, ಕಾನೂನು ಸಲಹೆಗಾರ್ತಿ ಗೀತಾ, ಇತರೆ ಅಧಿಕಾರಿಗಳು ಹಾಜರಿದ್ದರು.