

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಜಂಟಿಯಾಗಿ ಶುಕ್ರವಾರ ಬೆಳಗ್ಗೆ ತಿರುಮಲದಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು. ಬಳಿಕ ತಿರುಮಲದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ರಾಜ್ಯದ ನೂತನ ವಸತಿ ಗೃಹ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದರು.
ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿ, ಜನರ ಬಳಕೆಗೆ ಕಟ್ಟಡವನ್ನು ಅನುಕೂಲ ಮಾಡಿಕೊಡುವಂತೆ ಹಾಲಿ ಮತ್ತು ಮಾಜಿ ಸಿಎಂಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯಡಿಯೂರಪ್ಪ ಅವರು ಕೇಂದ್ರ ಬಿಜೆಪಿ ಸಂಸದೀಯ ಮಂಡಳಿಗೆ ಆಯ್ಕೆಯಾದ ಬೆನ್ನಲ್ಲೇ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದರು. ಟಿಟಿಡಿ ಅಧ್ಯಕ್ಷ ಸುಬ್ಬಾರೆಡ್ಡಿ ಅವರು ಹಾಲಿ ಮತ್ತು ಮಾಜಿ ಸಿಎಂಗಳಿಗೆ ಶಾಲು ಹೊದಿಸಿ ಗೌರವಿಸಿದರು. ಕಂದಾಯ ಸಚಿವ ಆರ್.ಅಶೋಕ್, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಇತರರು ಉಪಸ್ಥಿತರಿದ್ದರು.