

ಕುಂದಾಪುರ: ಶಿಕ್ಷಣದಲ್ಲಿ ಸತತ ಪ್ರಯತ್ನದಿಂದ ಸಾಧನೆ ಮಾಡಲು ಸಾಧ್ಯ. ವಿದ್ಯಾರ್ಥಿ ಜೀವನದಲ್ಲಿ ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿದರೆ ಅವರ ಮುಂದಿನ ಭವಿಷ್ಯ ಉತ್ತಮವಾಗಿ ರೂಪುಗೊಳ್ಳುತ್ತದೆ. ಕಠಿಣ ಪರಿಶ್ರಮದ ಮೂಲಕ ಜೀವನದಲ್ಲಿ ಯಶಸ್ಸು ಪಡೆದು ಹೆತ್ತವರಿಗೆ ಬೆನ್ನೆಲುಬಾಗಿ ನಿಲ್ಲಬೇಕು ಎಂದು ಕೆನರಾ ಬ್ಯಾಂಕ್‌ನ ನಿವೃತ್ತ ಡಿಜಿಎಂ ರತ್ನಾಕರ ಗಾಣಿಗ ಹೇಳಿದರು. ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಸ್ಕೂಲ್ ಅಸೋಸಿಯೇಶನ್ ವತಿಯಿಂದ ಎಸ್.ವಿ. ಪದವಿಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳ ದ್ವಿತೀಯ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸಾಧಕ ವಿದ್ಯಾರ್ಥಿಗಳಿಗೆ ಶನಿವಾರ ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿದರು. ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಸ್ಕೂಲ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಅಧ್ಯಕ್ಷತೆ ವಹಿಸಿದ್ದರು. ಕೆನರಾ ಬ್ಯಾಂಕ್ ಗಂಗೊಳ್ಳಿ ಶಾಖೆಯ ಹಿರಿಯ ವ್ಯವಸ್ಥಾಪಕ ವಾಸು ದೇವಾಡಿಗ ಶುಭಾಶಂಸನೆ ಮಾಡಿದರು. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕ ರಾಘವೇಂದ್ರ ಶೇರುಗಾರ್, ಕನ್ನಡ ಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲ ಗೋಪಾಲ ದೇವಾಡಿಗ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ.ಸ್ವಾಗತಿಸಿದರು. ಅಸೋಸಿಯೇಶನ್ ಸದಸ್ಯ ಕೆ.ರಾಮನಾಥ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕಿ ಸುಗುಣ ಆರ್.ಕೆ.ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕಿ ಪವಿತ್ರಾ, ಪ್ರಫುಲ್ಲಾ, ಶಿಕ್ಷಕಿಯರಾದ ಲವಿನಾ ಸಿಕ್ವೇರಾ, ಸುಜಾತಾ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ ಕಾರ್ಯಕ್ರಮ ನಿರ್ವಹಿಸಿದರು.
2024-25ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಯ ರ‌್ಯಾಂಕ್ ವಿಜೇತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು ಹಾಗೂ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಡಾ.ಉಮೇಶ ಪುತ್ರನ್ ಅವರು ನೀಡಿದ ನಗದು, ವಾಣಿಜ್ಯ ವಿಭಾಗದಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ನಗರ ಕೃಷ್ಣಾನಂದ ನಾಯಕ್ ಅವರು ನೀಡಿದ ನಗದು ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶಾಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಎಸ್.ವಿ.ನಾಯಕ್ ಅವರು ನೀಡಿದ ನಗದು ಬಹುಮಾನ ನೀಡಿ ಗೌರವಿಸಲಾಯಿತು.