ರಾಯಣ್ಣನ ಕಂಚಿನ ಪುತ್ಥಳಿ ನಿರ್ಮಾಣ

Published on

ಬಳ್ಳಾರಿ : ನಗರದಲ್ಲಿರುವ ಸಂಗೊಳ್ಳಿ ರಾಯಣ್ಣನ ಪುತ್ಥಳಿಯು ಫೈಬರ್‌ನಿಂದ ತಯಾರಿಸಲಾಗಿದ್ದು, ಇದನ್ನು ತೆರವುಗೊಳಿಸಿ ನೂತನ ಕಂಚಿನ ಪುತ್ಥಳಿಯನ್ನು ನಿರ್ಮಿಸಿ ಸ್ಥಾಪಿಸಲಾಗುವುದು ಎಂದು ನಗರ ಶಾಸಕ ನಾರಾ ಭರತ್‌ರೆಡ್ಡಿ ಹೇಳಿದರು.

ಇಲ್ಲಿನ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಮುಂಭಾಗದಲ್ಲಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಮಾತನಾಡಿದರು. ಈ ಹಿಂದೆ ರಾಯಣ್ಣನ ಪ್ರತಿಮೆ ಸ್ಥಾಪನೆ ವೇಳೆ ಸರ್ಕಾರ ಹಾಗೂ ಕಾನೂನಾತ್ಮಕ ಅನುಮತಿಗಳನ್ನು ಪಡೆಯಲಾಗಿರಲಿಲ್ಲ. ಹೀಗಾಗಿ ಪುತ್ಥಳಿಯ ಅನಾವರಣ ಕಾರ್ಯ ನೆನೆಗುದಿಗೆ ಬಿದ್ದಿತ್ತು. ಸಮುದಾಯದ ಮುಖಂಡರ ಬೇಡಿಕೆಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಅವರ ಗಮನಕ್ಕೆ ತಂದು, ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ಅನುಮತಿ ದೊರಕಿಸಿ ಕೊಟ್ಟಿದ್ದೇವೆ ಎಂದರು.

ಪುತ್ಥಳಿಯ ಸ್ಥಾಪನೆ ವಿಚಾರದಲ್ಲಿ ನನ್ನೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್, ಮಾಜಿ ಸಚಿವ ಬಿ.ನಾಗೇಂದ್ರ ಅವರು ಕೂಡ ಸರ್ಕಾರದ ಮೇಲೆ ಒತ್ತಡ ತಂದು ಈ ಕಾರ್ಯವನ್ನು ಸಾಧ್ಯವಾಗಿಸಿದ್ದಾರೆ ಎಂದು ಹೇಳಿದರು. ಬಳಿಕ ಕುರುಬ ಸಮುದಾಯದ ಹಾಗೂ ವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿ ನಿರ್ಮಾಣ ಹೋರಾಟ ಸಮಿತಿಯ ಮುಖಂಡರೊಂದಿಗೆ ಮಾತುಕತೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net