

ಬೆಂಗಳೂರು: ನಿಗಿದಿಪಡಿಸಿದ ಸಂಖ್ಯೆಗಿಂತ ಹೆಚ್ಚಿನ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನಗಳ ವಿರುದ್ಧ ನಗರದಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದ ಸಂಚಾರ ಪೊಲೀಸರು, 1400 ವಾಹನಗಳ ತಪಾಸಣೆ ನಡೆಸಿ ನಿಯಮ ಉಲ್ಲಂಘಿಸಿದ 708 ವಾಹನಗಳ ವಿರುದ್ಧ ಗುರುವಾರ ಪ್ರಕರಣ ದಾಖಲಿಸಿದ್ದಾರೆ.
ಪ್ರಸಕ್ತ ತಿಂಗಳ ಮೊದಲ ವಾರದಲ್ಲಿ ನಗರದ ಎಲ್ಲಾ 48 ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯ ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಾಲಾ ವಾಹನಗಳ ಮಾಲೀಕರು ಮತ್ತು ಶಾಲಾ ಮಕ್ಕಳನ್ನು ಕರೆದೊಯ್ಯವ ಖಾಸಗಿ ವಾಹನಗಳ ಚಾಲಕರಗಳು ಹಾಗೂ ಮಕ್ಕಳ ಪಾಲಕರೊಂದಿಗೆ ಸಭೆ ನಡೆಸಲಾಗಿತ್ತು. ಸುಪ್ರೀಂ ಕೋರ್ಟ್ ಮತ್ತು ರಾಜ್ಯ ಸರ್ಕಾರದಿಂದ ನೀಡಲಾಗಿರುವ ನಿರ್ದೇಶನಗಳು ಮತ್ತು ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ನೊಟಿಸ್‌ಗಳನ್ನು ಜಾರಿ ಮಾಡಲಾಗಿತ್ತು. ಆದರೂ ಸೂಚನೆ ಪಾಲಿಸದ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಾಚರಣೆ ವೇಳೆ ಶಾಲಾ ಮತ್ತು ಖಾಸಗಿ ವಾಹನಗಳಲ್ಲಿ ನಿಗದಿಪಡಿಸಿದ ಸಂಖ್ಯೆಗಿಂತ ಹೆಚ್ಚಿನ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಚಾಲಕರ ವಿರುದ್ಧ ಕರ್ನಾಟಕ ಮೋಟಾರು ವಾಹನ ಕಾಯ್ದೆ ೧೯೮೯ ನಿಯಮ ೨೫(೮)ರ ಅಡಿ ಪ್ರಕರಣ ದಾಖಲಾಗಿಸಲಾಗಿದೆ.
ಶಾಲಾ ಮಕ್ಕಳ ಹಿತದೃಷ್ಟಿಯಿಂದ ಕೈಗೊಳ್ಳಲಾಗುತ್ತಿರುವ ಈ ವಿಶೇಷ ಕಾರ್ಯಾಚರಣೆಯನ್ನು ಮುಂದಿನ ದಿನಗಳಲ್ಲಿಯೂ ನಿರಂತರವಾಗಿ ಮುಂದುವರಿಸಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.
೭೦೮ ವಾಹನಗಳ ವಿರುದ್ಧ ಪ್ರಕರಣಗಳು ದಾಖಲು:
ನಗರ ಸಂಚಾರ ಪೊಲೀಸರು ಒಟ್ಟು ೧,೪೦೦ ಶಾಲಾ ಮತ್ತು ಖಾಸಗಿ ವಾಹನಗಳನ್ನು ತಪಾಸಣೆ ಮಾಡಿದ್ದು, ನಿಗಿದತ ಸಂಖ್ಯೆಗಿಂತ ಹೆಚ್ಚಿನ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ೭೦೮ ವಾಹನಗಳ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಪೈಕಿ ೨೪೭ ಬಸ್, ೯೭ ಆಟೋ ರಿಕ್ಷಾ, ೧೩೪ ಆಮ್ನಿ ಕಾರು, ೨೦೧ ವ್ಯಾನ್ ಹಾಗೂ ೨೯ ಇತರೆ ವಾಹನಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.