ಬೆಂಗ್ಳೂರಲ್ಲಿ ಕಾಂಗ್ರೆಸ್ ಬೃಹತ್​ ಪ್ರತಿಭಟನೆ: ಬಿಜೆಪಿಯ ದ್ವೇಷ ರಾಜಕೀಯಕ್ಕೆ ಟೂಲ್​ ಕಿಟ್​ ಆಗಿವೆ ಐಟಿ, ಇಡಿ, ಸಿಬಿಐ...

congress protest
Published on

ಬೆಂಗಳೂರು: ಐಟಿ, ಇಡಿ, ಸಿಬಿಐ ಸ್ವಾಯುತ್ತ ಸಂಸ್ಥೆಗಳಾಗಿ ಉಳಿದಿಲ್ಲ, ಅವು ಬಿಜೆಪಿಯ ದ್ವೇಷ ರಾಜಕೀಯಕ್ಕೆ, ಆಪರೇಷನ್ ಕಮಲಕ್ಕೆ ಬಳಸುವ #Toolkit ಆಗಿವೆ ಎಂದು ಆರೋಪಿಸಿ ದೇಶಾದ್ಯಂತ ಸೋಮವಾರ ಕಾಂಗ್ರೆಸ್​ ಪ್ರತಿಭಟನೆ ನಡೆಸುತ್ತಿದೆ. ಕರ್ನಾಟಕದಲ್ಲೂ ಕಾಂಗ್ರೆಸ್​ ಬೀದಿಗಿಳಿದು ಬೃಹತ್​ ಪ್ರತಿಭಟನೆ ನಡೆಸುತ್ತಿದೆ.

ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಸಕರು, ಜಿಪಂ, ತಾಪಂ, ಗ್ರಾಪಂ ಸದಸ್ಯರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್​ ಮುಖಂಡರು-ಕಾರ್ಯಕರ್ತರು ಜಮಾವಣೆಗೊಂಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗುತ್ತಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣ ನೈಜವಾದುದಲ್ಲ, ಕಾಂಗ್ರೆಸ್ ಮೇಲೆ ಆರೋಪಗಳನ್ನು ಜೀವಂತವಾಗಿಡುವ ದುರುದ್ದೇಶ ಹಾಗೂ ದ್ವೇಷದ ಪ್ರಯತ್ನ. "ನ್ಯಾಷನಲ್ ಹೆರಾಲ್ಡ್" ಭಾರತದ ಸ್ವತಂತ್ರ ಚಳವಳಿಯ ಭಾಗವಾಗಿ ಹುಟ್ಟಿಕೊಂಡ ಪತ್ರಿಕೆ, ಭಾರತದ ಪರಂಪರೆಯಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನ ಹೊಂದಿರುವ ಪತ್ರಿಕೆ. ಸ್ವತಂತ್ರದ ಬೆಲೆ ಅರಿಯದ ಬಿಜೆಪಿ ಇಂದು ದ್ವೇಷಕ್ಕೆ ನ್ಯಾಷನಲ್ ಹೆರಾಲ್ಡ್‌ ಅನ್ನು ಬಳಸುತ್ತಿದೆ. ಬಿಜೆಪಿಯ ಕೀಳು ರಾಜಕೀಯದ ಆಯಸ್ಸು ಶೀಘ್ರವೇ ಮುಗಿಯಲಿದೆ ಎಂದು ಕಿಡಿಕಾರಿದ್ದಾರೆ.

IT ED CBI ನಂತಹ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ತನ್ನ ರಾಜಕೀಯ ವಿರೋಧಿಗಳನ್ನು ಹಣಿಯಲು ಹೊರಟಿರುವುದು ಬಿಜೆಪಿಯ ನೀಚತನದ ರಾಜಕಾರಣಕ್ಕೆ ಸಾಕ್ಷಿ. IT, ED ಯಂತಹ ಸಂಸ್ಥೆಗಳನ್ನು ಬಳಸಿಕೊಂಡು ಕಾಂಗ್ರೆಸ್ ಪಕ್ಷದ ಧ್ವನಿಯನ್ನು ಹತ್ತಿಕುತ್ತೇವೆ ಎಂದುಕೊಂಡಿದ್ದರೆ ಅದು ಬಿಜೆಪಿಯ ಮೂರ್ಖತನ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ. ಬೆಂಗಳೂರಿನ ಇಡಿ ಕಚೇರಿ ಎದರು ಕಾಂಗ್ರೆಸ್​ನ ಸಾವಿರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಪೊಲೀಸ್​ ಬಂದೋಬಸ್ತ್​ ಏರ್ಪಡಿಸಲಾಗಿದೆ. ಟ್ರಾಫಿಕ್​ ಜಾಮ್​ ಉಂಟಾಗಿದೆ.

ಏನಿದು ನ್ಯಾಷನಲ್​ ಹೆರಾಲ್ಡ್​ ಕೇಸ್​?: ಜವಾಹರಲಾಲ್ ನೆಹರು ಮತ್ತು ಇತರ ಕೆಲವು ಸ್ವಾತಂತ್ರ್ಯ ಹೋರಾಟಗಾರರು ಜತೆಗೂಡಿ 1938ರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಹುಟ್ಟುಹಾಕಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸ್ವತಂತ್ರ ದಳದ ಕಳವಳಗಳಿಗೆ ಧ್ವನಿಯಾಗುವುದು ಇದರ ಉದ್ದೇಶವಾಗಿತ್ತು. ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಪ್ರಕಾಶನದ ಈ ಪತ್ರಿಕೆಯು, ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ ಮುಖವಾಣಿಯಾಗಿತ್ತು.

2010ರಲ್ಲಿ ಕಾಂಗ್ರೆಸ್ ಪಕ್ಷದ ಆಗಿನ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಹುಲ್ ಗಾಂಧಿ ಯಂಗ್ ಇಂಡಿಯಾ ಲಿಮಿಟೆಡ್ ಸ್ಥಾಪಿಸಿದ್ದರು. ಈ ಕಂಪೆನಿಯು ಯಂಗ್ ಇಂಡಿಯಾ ಲಿಮಿಟೆಡ್ (ವೈಐಎಲ್), ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ನ ಷೇರುಗಳನ್ನು ಖರೀದಿ ಮಾಡುವಲ್ಲಿ ವಂಚನೆ ಹಾಗೂ ನಂಬಿಕೆ ದ್ರೋಹ ಎಸಗಿದೆ. ಇದರಲ್ಲಿ ಅನೇಕ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ ಎಂದು 2012ರಲ್ಲಿ ಬಿಜೆಪಿ ನಾಯಕ ಹಾಗೂ ವಕೀಲ ಸುಬ್ರಮಣಿಯನ್ ಸ್ವಾಮಿ ವಿಚಾರಣಾ ನ್ಯಾಯಾಲಯದಲ್ಲಿ ದೂರು ನೀಡಿದ್ದರು.

ಬಳಕೆಯಲ್ಲಿ ಇಲ್ಲದ ಮಾಧ್ಯಮ ಸಂಸ್ಥೆಯ ಆಸ್ತಿಗಳನ್ನು ಸ್ವಾಧೀನ ಪಡಿಸಿಕೊಂಡು ಸುಮಾರು 2 ಸಾವಿರ ಕೋಟಿ ರೂ. ಲಾಭ ಹಾಗೂ ಆಸ್ತಿ ಸಂಪಾದಿಸಲು ಯಂಗ್ ಇಂಡಿಯಾ ಲಿ. ವಾಮಮಾರ್ಗ ಅನುಸರಿಸಿದೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದ್ದು, ಜಾರಿ ನಿರ್ದೇಶನಾಲಯವು ರಾಹುಲ್​ ಮತ್ತು ಸೋನಿಯಾ ಅವರಿಗೆ ನೋಟಿಸ್​ ಜಾರಿ ಮಾಡಿ ಖುದ್ದು ಹಾಜರಿಗೆ ಆದೇಶಿಸಿತ್ತು. ಇಂದು(ಸೋಮವಾರ) ಸೋನಿಯಾ ಮತ್ತು ರಾಹುಲ್​ ಇಬ್ಬರೂ ಇಡಿ ಕಚೇರಿಗೆ ತೆರಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net