

ಚಿಕ್ಕಮಗಳೂರು: ಡಾ. ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ಸಂವಿಧಾನ ಜಾರಿಗೆ ಬಂದ ದಿನದಿಂದ ದೇಶದ ಪ್ರಜಾಪ್ರಭುತ್ವಕ್ಕೆ ಗಟ್ಟಿಯಾದ ತಳಹದಿ ದೊರೆತಿದೆ ಎಂದು ಜಿಲ್ಲಾ ಬಿಜೆಪಿ ನಿಯೋಜಿತ ಅಧ್ಯಕ್ಷ ದೇವರಾಜ ಶೆಟ್ಟಿ ಹೇಳಿದರು.
ನಗರದ ಜಿಲ್ಲಾ ಬಿಜೆಪಿ ಪಾಂಚಜನ್ಯ ಕಚೇರಿಯಲ್ಲಿ ನಡೆದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ನೇತೃತ್ವದಲ್ಲಿ ಸಂವಿಧಾನ ರಚನೆಯಾದ ಪರಿ ವರ್ಣಿಸಲು ಸಾಧ್ಯವಿಲ್ಲ. ಈ ದಿನ ನಾವೆಲ್ಲರೂ ಅಂಬೇಡ್ಕರ್, ಸಂವಿಧಾನ ಮತ್ತು ದೇಶದ ಪ್ರಗತಿಯನ್ನು ಅವಲೋಕಿಸಬೇಕು ಎಂದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 10ವರ್ಷದಲ್ಲಿ ದೇಶದ ಹಿರಿಮೆಯನ್ನು ಜಗತ್ತಿನಾದ್ಯಂತ ಕೊಂಡೊಯ್ದಿದ್ದಾರೆ. ಎಲ್ಲ ಕ್ಷೇತ್ರದಲ್ಲಿ ದೇಶ ಅಭಿವೃದ್ಧಿ ಕಂಡಿದೆ. ಎಲ್ಲ ಜಾತಿ, ವರ್ಗದ ಜನರ ಬದುಕನ್ನು ಗಮನದಲ್ಲಿಟ್ಟುಕೊಂಡು ಅನುಷ್ಟಾನಗೊಂಡಿರುವ ವಿವಿಧ ಯೋಜನೆಗಳು ಇಂದು ಜಗತ್ತಿನ ಗಮನ ಸೆಳೆದಿವೆ. ತಮ್ಮ ಕಾರ್ಯಶೈಲಿ ಮತ್ತು ಪ್ರಗತಿಪರ ದೃಷ್ಟಿಯಿಂದ ಜಗತ್ತು ಭಾರತದತ್ತ ನೋಡುವಂತೆ ಮಾಡಿದ್ದಾರೆ ಎಂದು ಬಣ್ಣಿಸಿದರು.
ಬಿಜೆಪಿ ನಗರ ಮಂಡಲ ಅಧ್ಯಕ್ಷ ಮಧುಕುಮಾರರಾಜ ಅರಸ್, ಮುಖಂಡರಾದ ಹಿರೇಮಗಳೂರು ಪುಟ್ಟಸ್ವಾಮಿ, ಕಡೂರು ರುದ್ರೇಶ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ನರೇಂದ್ರ, ಜಿಲ್ಲಾ ಬಿಜೆಪಿ ಸಂಘಟನಾ ಕಾರ್ಯದರ್ಶಿ ಸೀತಾರಾಮ ಭರಣ್ಯ, ಬಿಜೆಪಿ ಗ್ರಾಮಾಂತರ ಮಹಿಳಾ ಮೋರ್ಚಾ ಅಧ್ಯಕ್ಷೆ ಜೆಸಿಂತಾ ಅನಿಲ್, ಒಬಿಸಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕನಕರಾಜ ಅರಸ್, ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಮತ್ತಿತರರಿದ್ದರು.