

ಮೈಸೂರು: ಮೈಸೂರು ನಗರದಲ್ಲಿ ಜುಲೈ 07 ರಂದು ಒಟ್ಟು 04 ಪರೀಕ್ಷಾ ಕೇಂದ್ರಗಳಲ್ಲಿ ಪರ್ಸನಲ್ ಅಸಿಸ್ಟೆಂಟ್ ಇನ್ EPFO ಮತ್ತು ನರ್ಸಿಂಗ್ ಆಫೀಸರ್ ಇನ್ ESIC -2024 ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪರೀಕ್ಷಾ ಕೇಂದ್ರದ ಸುತ್ತಲೂ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ಜೆಎಲ್‌ಬಿ ರಸ್ತೆಯ ಮಹಾರಾಜ ಸರ್ಕಾರಿ ಪಿಯು ಕಾಲೇಜು, ಪೀಪಲ್ಸ್ ಪಾರ್ಕ್ನ ಸರ್ಕಾರಿ ಪಿಯು ಕಾಲೇಜ್ ಫಾರ್ ಗರ್ಲ್ಸ್, ದೇವರಾಜ ಮೊಹಲ್ಲಾದ ದೇವರಾಜ ಸರ್ಕಾರಿ ಬಾಲಕಿಯರ ಪಿಯು ಕಾಲೇಜು ಹಾಗೂ ನಾರಾಯಣ ಶಾಸ್ತ್ರೀ ರಸ್ತೆಯ ಮಹಾರಾಣಿ ಸರ್ಕಾರಿ ಪಿಯು ಕಾಲೇಜು ಪ್ರದೇಶಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ ಬೆಳಿಗ್ಗೆ 6 ಗಂಟೆಯಿoದ ಸಂಜೆ 6 ಗಂಟೆಯವರೆಗೆ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023 ಸೆಕ್ಷನ್ 163 ರೀತ್ಯ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತಲೂ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಗಳನ್ನು ಹೊರತುಪಡಿಸಿ ಅನಧಿಕೃತ ವ್ಯಕ್ತಿಗಳು ಸಂಚರಿಸಬಾರದು ಮತ್ತು ಯಾರೂ ಆಕ್ಷೇಪಾರ್ಹ ವಸ್ತುಗಳನ್ನು ಒಯ್ಯಬಾರದು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್/ಸೈಬರ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಆದೇಶಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರಾದ ರಮೇಶ್.ಬಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.