

ಅರಸೀಕೆರೆ: ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ನ.1ರಂದು ನಗರದ ಹಳೆಯ ಮಾಧ್ಯಮಿಕ ಶಾಲಾ ಆವರಣದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ತಹಸೀಲ್ದಾರ್ ಎಂ.ಜಿ.ಸಂತೋಷ್ ಕುಮಾರ್ ತಿಳಿಸಿದರು.
ತಾಲೂಕು ಕಚೇರಿ ಆವರಣದಲ್ಲಿರುವ ರೈತ ಭವನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಿಕ್ಷಣ, ಸಾಹಿತ್ಯ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಲಾಗುವುದು. ಮೆರವಣಿಗೆಯಲ್ಲಿ ಜಾನಪದ ಕಲಾತಂಡಗಳು, ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳಿಗೆ ಅವಕಾಶ ನೀಡಲಾಗುವುದು. ವಿವಿಧ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದು, ಎಲ್ಲ ಸಹಕಾರ ಅಗತ್ಯ ಎಂದರು.
ಶಾಸಕ ಕೆ.ಎಂ.ಶಿವಲಿಂಗೇಗೌಡ, ತಾಪಂ ಇಒ ನಾಗರಾಜ್, ಡಿವೈಎಸ್‌ಪಿ ಲೋಕೇಶ್, ನಗರಸಭೆ ಪೌರಾಯುಕ್ತ ಕೃಷ್ಣಮೂರ್ತಿ ಕಸಾಪ ತಾಲೂಕು ಅಧ್ಯಕ್ಷ ಚಂದ್ರಶೇಖರ ಬಾಬು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.