

ವಿಜಯವಾಣಿ ಸುದ್ದಿಜಾಲ ಕೊರಟಗೆರೆ
ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಎತ್ತಿ ಹಿಡಿಯುವ ಮೂಲಕ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಸಾಮಾಜಿಕ ನ್ಯಾಯಕ್ಕೆ ಹಾಗೂ ಕಳೆದ 30 ವರ್ಷಗಳ ನಿರಂತರ ಹೋರಾಟಕ್ಕೆ ಸಂದ ಜಯ ಎಂದು ದಲಿತ ಮುಖಂಡ ದಾಡಿ ವೆಂಕಟೇಶ್ ತಿಳಿಸಿದರು.
ಪಟ್ಟಣದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಿಂದ ತಾಲೂಕು ಕಚೇರಿವರೆಗೆ ಮಂಗಳವಾರ ಸ್ವಾಭಿಮಾನಿ ಆದಿಜಾಂಬವ ಮಾದಿಗ ಸಂಘದಿಂದ ಪ.ಜಾತಿ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಮೆರವಣಿಗೆ ನಡೆಸಿ ಮಾತನಾಡಿ, ಒಳ ಮೀಸಲಾತಿ ಜಾರಿಗಾಗಿ ದಶಕಗಳ ಹೋರಾಟ ನಡೆದಿತ್ತು. ಈಗ ಸುಪ್ರೀಂ ಕೋರ್ಟ್ ಆಯಾ ರಾಜ್ಯಗಳಿಗೆ ಒಳ ಮೀಸಲಾತಿ ಜಾರಿಗೊಳಿಸಲು ಅನುಮತಿ ನೀಡಿರುವುದು ಸಂತಸ ತಂದಿದೆ. ಸುಪ್ರೀಂ ಕೋರ್ಟ್ ನೀಡಿದ ಐತಿಹಾಸಿಕ ತೀರ್ಪು ಭಾರತೀಯ ಸಂವಿಧಾನದ ಆಶಯವನ್ನು ಮತ್ತಷ್ಟು ಗಟ್ಟಿಗೊಳಿಸಿದೆ ಎಂದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಗಂಭೀರವಾಗಿ ಪರಿಗಣಿಸುವುದರ ಜತೆಗೆ ಪ.ಜಾತಿ ಮಾದಿಗರಿಗೆ ಒಳ ಮೀಸಲಾತಿ ಕಲ್ಪಿಸಿ ಬಹುಕಾಲದ ಬೇಡಿಕೆಯನ್ನು ತುರ್ತಾಗಿ ಜಾರಿ ಮಾಡುವಂತೆ ತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.
ಜಿಲ್ಲಾ ದಲಿತ ಸಂಘಟನಾ ಸಂಚಾಲಕ ಎಚ್.ಸಿ.ದೊಡ್ಡಯ್ಯ ಮಾತನಾಡಿ, ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಹಲವು ವರ್ಷಗಳಿಂದ ಹೋರಾಟ ನಡೆಯುತ್ತಿತ್ತು. ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ಇದರಿಂದ ಮಾದಿಗ ಸಮುದಾಯಕ್ಕೆ ಅನುಕೂಲವಾಗಲಿದೆ ಎಂದರು.
ಅಂಬೇಡ್ಕರ್ ಪ್ರತಿಮೆ ನಿಮಾರ್ಣಕ್ಕೆ ಮನವಿ: ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹ. ಚಿನ್ನಯ್ಯ ತೀರ್ಪನ್ನು ರದ್ದುಗೊಳಿಸಿ, ದೇವೀಂದ್ರ ಸಿಂಗ್ ಪ್ರಕರಣದ ತೀರ್ಪನ್ನು ಎತ್ತಿ ಹಿಡಿದಿದೆ. ಅಸಮಾನತೆ ಒಳಗಾದವರಿಗೆ ಸಮಾನತೆ ಕಲ್ಪಿಸುವ ನಿಟ್ಟಿನಲ್ಲಿ ತೀರ್ಪು ಸಿಕ್ಕಿದೆ. ಎಸ್ಸಿ ಮೀಸಲು ಕೊರಟಗೆರೆ ಕ್ಷೇತ್ರಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ತ್ವರಿತಗತಿಯಲ್ಲಿ ನಿರ್ಮಿಸುವಂತೆ ದಲಿತ ಸಂರಕ್ಷಣಾ ಸಮಿತಿ ರಾಜ್ಯ ಸಂಚಾಲಕ ಜೆಟ್ಟಿ ಅಗ್ರಹಾರ ನಾಗರಾಜು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ ಅವರಿಗೆ ಮನವಿ ಮಾಡಿದರು. ಮುಖಂಡರಾದ ದಾಸರಹಳ್ಳಿ ಶಿವರಾಮಣ್ಣ, ಜಯರಾಮ್, ಸುಬ್ಬಣ್ಣ, ಅರಸಾಪುರ ರಮೇಶ್, ಗಂಗಣ್ಣ, ವೀರಕ್ಯಾತಯ್ಯ, ಬುರುಗನಹಳ್ಳಿರವಿ, ತೇಜಸ್, ಆನಂದ್, ನಾಗರಾಜು, ಸಿದ್ದಪ್ಪ, ದೊಡ್ಡಯ್ಯ, ಇತರರಿದ್ದರು.