ವಿಜೃಂಭಣೆಯಿಂದ ರಾಜ್ಯೋತ್ಸವ ಆಚರಣೆಗೆ ನಿರ್ಧಾರ

27 vikram 6
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ಪೂರ್ಣಗೊಳ್ಳಲಿರುವ ಸಂದರ್ಭದಲ್ಲಿ ಕರ್ನಾಟಕ ಸಂಭ್ರಮ-50 ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಹೆಸರಿನಲ್ಲಿ ವಿಜೃಂಭಣೆಯಿಂದ ರಾಜ್ಯೋತ್ಸವ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ.ತಿಳಿಸಿದರು.
ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬಂಧಿಸಿ ಮತ್ತು ಯುವ ಜನರಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕ ಎಂಬ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ನ. 1 ರಂದು ಬೆಳಗ್ಗೆ 9 ಗಂಟೆಗೆ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದರು.
ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಕನ್ನಡಾಂಬೆಗೆ ನುಡಿ ನಮನ ಅರ್ಪಿಸಲಾಗುತ್ತಿದೆ. ನಾಡಿನ ಹೆಸರಾಂತ ಕವಿಗಳಾದ ಹುಯಿಲಗೋಳ ನಾರಾಯಣರಾಯರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಕುವೆಂಪು ಅವರ ಎಲ್ಲಾದರೂ ಇರು ಎಂತಾದರು ಇರು, ದ.ರಾ. ಬೇಂದ್ರೆ ಅವರ ಒಂದೇ ಒಂದೇ ಒಂದೇ ಕರ್ನಾಟಕ ಒಂದೇ, ಸಿದ್ದಯ್ಯ ಪುರಾಣಿಕರ ಹೊತ್ತಿತೋ ಹೊತ್ತಿತೋ ಕನ್ನಡದ ದೀಪ ಹಾಗೂ ಚೆನ್ನವೀರ ಕಣವಿ ಅವರ ಹೆಸರಾಯಿತು ಕನ್ನಡ ಉಸಿರಾಗಲಿ ಕನ್ನಡ ಗೀತೆಗಳು ಏಕಕಾಲದಲ್ಲಿ ಕನ್ನಡ ಹಾಡುಗಳ ಗೀತಗಾಯನ ಕಾರ್ಯಕ್ರಮ ನಡೆಯಲಿವೆ ಎಂದರು.
ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net