ಒಳ್ಳೆಯ ಹವ್ಯಾಸಗಳಿಂದ ನೆಮ್ಮದಿಯ ಜೀವನ : ಜಂಟಿ ನಿರ್ದೇಶಕ ಡಾ ಜಿ.ಶ್ರೀನಿವಾಸ್ ಸಲಹೆ

25CBP2
Published on

ಚಿಕ್ಕಬಳ್ಳಾಪುರ: ದುಶ್ಚಟಗಳಿಂದ ದೂರವಿದ್ದು ಒಳ್ಳೆಯ ಹವ್ಯಾಸಗಳಿಂದ ನೆಮ್ಮದಿಯ ಜೀವನ ನಡೆಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಡಾ ಜಿ.ಶ್ರೀನಿವಾಸ್ ಕರೆ ನೀಡಿದರು.

ಜಿಲ್ಲಾಡಳಿತ, ಜಿಪಂ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಕೈಗೊಂಡಿದ್ದ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಅರಿವು ಮೂಡಿಸುವ ಜಾಥಾಗೆ ಗುರುವಾರ ನಗರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದರು.

ಒಬ್ಬ ವ್ಯಕ್ತಿಯ ದುಶ್ಚಟಗಳು ಕುಟುಂಬ, ಸಮಾಜದ ಮೇಲೆ ದುಷ್ಪ್ಪರಿಣಾಮ ಬೀರುತ್ತದೆ. ಅದರಲ್ಲೂ ತಂಬಾಕು ಉತ್ಪನ್ನಗಳ ಸೇವನೆ ಮಾರಕ ರೋಗಗಳಿಗೆ ಕಾರಣವಾಗುತ್ತದೆ. ಬಹಳಷ್ಟು ಮಂದಿ ಕ್ಷಣಿಕ ಸುಖಕ್ಕಾಗಿ ಮಾದಕ ವಸ್ತುಗಳನ್ನು ಸೇವಿಸಿ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ವಿಷಾದಿಸಿದರು.

ಈಗಾಗಲೇ ಕಾನೂನು ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಧೂಮಪಾನ, ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಜಾಹೀರಾತು ಪ್ರದರ್ಶನವನ್ನು ನಿಷೇಧಿಸಲಾಗಿದೆ. ಇದರ ಮಹತ್ವವನ್ನು ಪ್ರತಿಯೊಬ್ಬರು ಅರಿಯಬೇಕು ಎಂದು ಡಾ.ಶ್ರೀನಿವಾಸ್ ಸಲಹೆ ನೀಡಿದರು.

ತಂಬಾಕಿನಲ್ಲಿ 3 ಸಾವಿರದಿಂದ 4 ಸಾವಿರ ನಾನಾ ರಾಸಾಯನಿಕ ವಸ್ತುಗಳಿದ್ದು, ಇದರ ಸೇವನೆಯಿಂದ 60 ರೀತಿಯ ಮಾರಕ ಕಾಯಿಲೆಗಳು ಬರುತ್ತವೆ. ಇದರಲ್ಲಿ ಭಯಾನಕ ಕ್ಯಾನ್ಸರ್ ಸಹ ಬಾಧಿಸಲಿದೆ ಎಂದು ಎಚ್ಚರಿಸಿದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ ಯಲ್ಲಾ ರಮೇಶ್ ಬಾಬು, ಜಿಲ್ಲಾಸ್ಪತ್ರೆಯಲ್ಲಿ ತಂಬಾಕು ವ್ಯಸನ ಮುಕ್ತ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ದುಶ್ಚಟಗಳಿಗೆ ದಾಸರಾದ ವ್ಯಸನಿಗಳಿಗೆ ಅಗತ್ಯ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ವಿನಿಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಹರೀಶ್, ತಾಲೂಕು ಆರೋಗ್ಯ ಅಧಿಕಾರಿ ಡಾ.ಮಂಜುಳಾ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ರಾಘವೇಂದ್ರ, ಸ್ವಯಂಸೇವಕ ಮಂಜುನಾಥ್, ಶಿಕ್ಷಣ ಇಲಾಖೆಯ ವಿಷಯ ನಿರೀಕ್ಷಕ ಅಂಜಿನಪ್ಪ ಮತ್ತಿತರರು ಇದ್ದರು.

ಗುಲಾಬಿ ಹೂವು ನೀಡಿ ಜಾಗೃತಿ: ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿ, ಸಾರ್ವಜನಿಕರಿಗೆ ಗುಲಾಬಿ ಹೂವುಗಳನ್ನು ನೀಡಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು, ಆರೋಗ್ಯ ಕಾರ್ಯಕರ್ತರು ಜಾಗೃತಿ ಮೂಡಿಸಿದರು. 18 ವರ್ಷದೊಳಗಿನ ಅಪ್ರಾಪ್ತ ಮಕ್ಕಳಿಗೆ ತಂಬಾಕು ಪದಾರ್ಥಗಳ ಮಾರಾಟ, ವಹಿವಾಟಿಗೆ ಮಕ್ಕಳನ್ನು ಬಳಸಿಕೊಳ್ಳುವುದನ್ನು ತಡೆಗಟ್ಟುವುದು ಗುಲಾಬಿ ಆಂದೋಲನದ ಉದ್ದೇಶ. ಬೀಡಿ, ಸಿಗರೇಟ್, ಖೈನಿ, ಹನ್ಸ್, ಕಡ್ಡಿಪುಡಿ ಸೇರಿ ತಂಬಾಕು ಉತ್ಪನ್ನಗಳನ್ನು ಸೇವಿಸದಂತೆ ತಡೆದರೆ ಸಾವಿನ ಪ್ರಕರಣಗಳನ್ನು ನಿಯಂತ್ರಿಸಬಹುದಾಗಿ ಹೇಳಿ, ಗುಲಾಬಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net