

ಮಡಿಕೇರಿ: ಅಧಿಕಾರಿಗಳು ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಧಿಕಾರಿಗಳಿಗೆ ಹೊಸ ವರ್ಷ ಆಚರಣೆಯ ಶುಭಾಶಯ ತಿಳಿಸಿ ಮಾತನಾಡಿದ ಅವರು, ಸರ್ಕಾರಿ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಮಾತನಾಡಿ, ಹಿಂದಿನ ಸಭೆಯಲ್ಲಿ ಚರ್ಚಿಸಲಾದ ಹತ್ತು ಪ್ರಕರಣಗಳ ಮಾಹಿತಿಯನ್ನು ಜಿಲ್ಲಾಧಿಕಾರಿಗಳಿಗೆ ಒದಗಿಸಿದರು. ಮುಂದಿನ ಸಭೆಗೆ ಮುನ್ನ ಇತ್ಯರ್ಥವಾಗದ ಪ್ರಕರಣ ಸರಿಪಡಿಸಲು ತಿಳಿಸಿದರು.
ಸಫಾಯಿ ಕರ್ಮಚಾರಿಗಳ ಸಮಿತಿಯ ಸದಸ್ಯ ರಂಗಸ್ವಾಮಿ ಮಾತನಾಡಿ, ಜಿಲ್ಲಾಧಿಕಾರಿ ವೆಂಕಟ್ ರಾಜಾರವರ ಅಧ್ಯಕ್ಷತೆಯಲ್ಲಿ ಸಫಾಯಿ ಕರ್ಮಚಾರಿಗಳ ಸಭೆ ನಡೆಸಲಾಗಿದ್ದು, ಸ್ವಚ್ಛತಾಗಾರರನ್ನು ಖಾಯಂಗೊಳಿಸಲು, ನಿವೇಶನದ ಹಕ್ಕುಪತ್ರ ಒದಗಿಸಲು, ಸಫಾಯಿ ಕರ್ಮಚಾರಿಗಳಿಗೆ ಭದ್ರತೆ ನೀಡಬೇಕು. ಸಫಾಯಿ ಕರ್ಮಚಾರಿಗಳಿಗೆ ಪಿಎಫ್ ಸೌಲಭ್ಯ ಹಾಗೂ ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಕೌಶಲ್ಯ ಆಧಾರಿತ ತರಬೇತಿಗೆ ಮನವಿ ಮಾಡಿದರು.
ಸಮಸ್ಯೆಗಳನ್ನು ಆಲಿಸಿದ ಜಿಲ್ಲಾಧಿಕಾರಿ ಪ್ರತಿಯೊಂದು ಪ್ರಕರಣಗಳನ್ನು ಹಂತ-ಹಂತವಾಗಿ ಪರಿಹರಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಮಾತನಾಡಿ, ವಿವಿಧ ಅಭಿವೃದ್ಧಿ ಇಲಾಖೆಗಳ ಪರಿಶಿಷ್ಟ ಪಂಗಡದ ಉಪಯೋಜನೆಗಳ ಬಗ್ಗೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಜನಾಂಗಕ್ಕೆ ನೀಡಲಾಗುತ್ತಿರುವ ಸೌಲಭ್ಯ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಮಾತನಾಡಿ, ಪ್ರಚಲಿತ ಕೋವಿಡ್ ಸಂಬಂಧಿಸಿದ ಮಾಹಿತಿಯನ್ನು ಜಿಲ್ಲಾಧಿಕಾರಿಗೆ ವಿವರಿಸಿ, ಕೋವಿಡ್ ಸಂಬಂಧಿಸಿದಂತೆ ಭಯಪಡುವ ಅಗತ್ಯ ಇಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಾಗಲೇ ತೆಗೆದುಕೊಂಡಿರುವುದಾಗಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತ್ ಸಿಇಒ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ವಿನಾಯಕ್ ನರ್ವಾಡೆ, ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆಯ ಯೋಜನಾ ಸಮನ್ವಯ ಅಧಿಕಾರಿ ಎಸ್.ಹೊನ್ನೇಗೌಡ, ಡಿವೈಎಸ್‌ಪಿ ಜಗದೀಶ್, ಸೆಸ್ಕ್ ಇಇ ಅನಿತಾ ಬಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಎನ್.ಮಂಜುನಾಥ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಪುಟ್ಟರಾಜು, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಅನಿತಾ ಭಾಸ್ಕರ್, ತಾ.ಪಂ.ಇಒಗಳಾದ ಅಪ್ಪಣ್ಣ, ಜಯಣ್ಣ ಇತರರು ಇದ್ದರು.