ಪಾವಗಡದಲ್ಲಿ ಬಸ್​ ಅಪಘಾತ: ಕಂಬನಿ ಮಿಡಿಯುತ್ತಲೇ ಹೆಚ್ಚಿನ ಪರಿಹಾರ ಕೊಡುವಂತೆ ಆಗ್ರಹಿಸಿದ ಎಚ್​ಡಿಕೆ

hdk
Published on

ಬೆಂಗಳೂರು: ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ಅಪಘಾತಕ್ಕೀಡಾಗಿ ಪ್ರಯಾಣಿಕರು ಸಾವನ್ನಪ್ಪಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ. ಅತಿವೇಗ ಹಾಗೂ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ಸಿಕ್ಕಿದ್ದು, ಬಸ್ಸಿನ ಟಾಪ್ ಮೇಲೆಯೇ 40ಕ್ಕೂ ಹೆಚ್ಚು ಪ್ರಯಾಣಿಕರು ಕೂತಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ. ಇದು ಸಾರಿಗೆ ಇಲಾಖೆ ನಿರ್ಲಕ್ಷ್ಯದ ಪರಮಾವಧಿ. ಈ ಬಗ್ಗೆ ಸರ್ಕಾರ ಕಠಿಣ ಕ್ರಮ ವಹಿಸಬೇಕು. ಕರ್ತವ್ಯ ಲೋಪ ಎಸಗಿರುವ ಸಾರಿಗೆ ಇಲಾಖೆ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ದುರಂತದಲ್ಲಿ ಜೀವ ಕಳೆದುಕೊಂಡ ಎಲ್ಲ ಅಮೂಲ್ಯ ಜೀವಗಳಿಗೆ ನನ್ನ ಶ್ರದ್ಧಾಂಜಲಿ ಹಾಗೂ ಎಲ್ಲ ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಸರಣಿ ಟ್ವೀಟ್​ ಮೂಲಕ ಎಚ್​ಡಿಕೆ ಸಂತಾಪ ಸೂಚಿಸಿದ್ದಾರೆ. ಜತೆಗೆ ಚನ್ನಪಟ್ಟಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಎಚ್​ಡಿಕೆ, ಪಾವಗಡ ಅತ್ಯಂತ ಬರಗಾಲ ಇರುವ ತಾಲೂಕು. ಬಸ್ ಅವಘಡದಲ್ಲಿ ಕೂಲಿನಾಲಿ ಮಾಡುವ ಜನರಿದ್ದರೆ ಹೆಚ್ಚಿನ ಪರಿಹಾರ ನೀಡಬೇಕು. ಹೆಚ್ಚಿನ ಪರಿಹಾರ ನೀಡಬೇಕಾದದ್ದು ರಾಜ್ಯ ಸರ್ಕಾರದ ಕರ್ತವ್ಯ. ಸಾರಿಗೆ ಸಚಿವರು ಹಾಗೂ ಸರ್ಕಾರ ಕೂಡಲೇ ಮಾಹಿತಿ ಪಡೆದು ಪರಿಹಾರ ನೀಡುವ ಕಾರ್ಯವಾಗಬೇಕು ಎಂದು ಆಗ್ರಹಿಸಿದ್ದಾರೆ. ಬಸ್ ಅವಘಡದಲ್ಲಿ ಯಾರ ತಪ್ಪಿದೆ? ಎಂದು ಪರಿಶೀಲನೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net