

ಮೈಸೂರು: ಸಂಪೂರ್ಣ ಭರ್ತಿಯಾದ ಎಚ್.ಡಿ.ಕೋಟೆಯ ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಬಾಗಿನ ಅರ್ಪಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಶಾಸಕರಾದ ಅನಿಲ್ ಚಿಕ್ಕಮಾದು, ಹರ್ಷವರ್ಧನ್ ಇತರರು ಮುಖ್ಯಮಂತ್ರಿಗೆ ಸಾಥ್ ನೀಡಿದರು.
ಮೈಸೂರಿನಿಂದ ಹೆಲಿಕಾಪ್ಟರ್ನಲ್ಲಿ ಕಬಿನಿಗೆ ಮಧ್ಯಾಹ್ನ 12.15ಕ್ಕೆ ಆಗಮಿಸಿದ ಸಿಎಂ ಅವರಿಗೆ ಪೂರ್ಣಕುಂಭ ಸ್ವಾಗತ ಕೋರಲಾಯಿತು. ನಂತರ ಪೂಜಾ ಕೈಂಕರ್ಯ ನೆರವೇರಿತು. ನಾಡಿನಲ್ಲಿ ಮಳೆ- ಬೆಳೆ ಉತ್ತಮವಾಗಿ ಆಗಲಿ ಎಂದು ಸಿಎಂ ಪ್ರಾರ್ಥಿಸಿದರು. 12.20ಕ್ಕೆ ಬಾಗಿನ ಅರ್ಪಿಸಿದರು.
ಕೇರಳದ ವಯನಾಡ್ ಹಾಗೂ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಗರಿಷ್ಠ 2,284 ಅಡಿಗಳಷ್ಟು ನೀರಿನ ಸಂಗ್ರಹಣಾ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 2,283.79 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಕಳೆದ ಬಾರಿ ಇದೇ ಅವಧಿಯಲ್ಲಿ 2,279.76 ಅಡಿಗಳಷ್ಟು ನೀರು ಸಂಗ್ರಹವಾಗಿತ್ತು. ಜಲಾಶಯಕ್ಕೆ 19,614 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ ನದಿಗೆ 8,417 ಕ್ಯೂಸೆಕ್ ನೀರು ಹರಿಯ ಬಿಡಲಾಗುತ್ತಿದೆ.